ಸೆ.18 ಮತ್ತು 19ರಂದು ಎಸ್‌ಡಿಎ ಪರೀಕ್ಷೆ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ


ಚಿತ್ರದುರ್ಗ,ಸೆ.16:
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಇದೇ ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸಿರುವ ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಾವುದೇ ದೂರ ಬಾರದಂತೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಎಸ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19ರ ಮಾರ್ಗಸೂಚಿ ಪಾಲನೆಯಾಗುವುದರ ಜೊತೆಗೆ ಪರೀಕ್ಷೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದAತೆ ಎಲ್ಲ ರೀತಿಯ ಸೂಕ್ತ ಕ್ರಮಕೈಗೊಂಡು ಅಚ್ಚುಕಟ್ಟಾಗಿ, ಲೋಪದೋಷವಿಲ್ಲದಂತೆ ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ರವಿಶಂಕರ್‌ರೆಡ್ಡಿ ಮಾತನಾಡಿ, ಸೆಪ್ಟೆಂಬರ್ 18ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬೆಳಿಗ್ಗೆ 10 ರಿಂದ 11.30 ರವರೆಗೆ ನಡೆಯಲಿದ್ದು, ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 534 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
 ಸೆಪ್ಟೆಂಬರ್19 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2.00 ರಿಂದ 3.00 ರವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ 9819 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಚಿತ್ರದುರ್ಗ ನಗರದ 25 ಪರೀಕ್ಷಾ ಕೇಂದ್ರಗಳಲ್ಲಿ 7265, ಚಳ್ಳಕೆರೆ ನಗರದ 08 ಪರೀಕ್ಷಾ ಕೇಂದ್ರಗಳಲ್ಲಿ 2160 ಅಭ್ಯರ್ಥಿಗಳು ಹಾಗೂ ಹಿರಿಯೂರು ನಗರದ 02 ಪರೀಕ್ಷಾ ಕೇಂದ್ರಗಳಲ್ಲಿ 394 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
  ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಬೇಕು. ಪ್ರತಿ ಕೇಂದ್ರಕ್ಕೆ ಒಬ್ಬ ಪುರುಷ ಹಾಗೂ ಒಬ್ಬ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಚಿತ್ರದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಇಬ್ಬರು ನೌಕರರನ್ನು ವೈದ್ಯಕೀಯ ತಪಾಸಣೆಗೆ ನಿಯೋಜಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.