ಸೆ.30 ರಿಂದ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ: ಸೋನಿಯಾ, ಪ್ರಿಯಾಂಕ ಭಾಗಿ-ಡಿಕೆಶಿ

ಬೆಂಗಳೂರು.‌ಸೆ.23- ಈ ತಿಂಗಳ ರಿಂದ ರಾಜ್ಯದಲ್ಲಿ ಭಾರತ್ ಜೋಡೊ ಯಾತ್ರೆ ಆರಂಭವಾಗಲಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.30ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಯಾತ್ರೆ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು ಎಂದು ಹೇಳಿದರು.
ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್​ ಗಾಂಧಿ ಅವರ ಜೊತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ರಾಹುಲ್ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದಾಳತ್ವ ವಹಿಸಬೇಕು ಎಂಬುದು ರಾಜ್ಯದ ಎಲ್ಲ ನಾಯಕರ ಒತ್ತಾಸೆ. ಆದರೆ, ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಎಐಸಿಸಿ ಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.