ಸೆ.9 ರಾಷ್ಟ್ರೀಯ ಜನತಾ ನ್ಯಾಯಾಲಯ

ಕೋಲಾರ, ಜು.೨೮ -ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ತಾಲ್ಲೂಕು ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು ಮತ್ತು ಕೆ.ಜಿ.ಎಫ್ ನ್ಯಾಯಾಲಯಗಳಲ್ಲಿ ಆಗಸ್ಟ್ ೦೯ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗುತ್ತಿದೆ. ಸದರಿ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕರು ನ್ಯಾಯಾಲಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶುಕ್ಲಾಕ್ಷ ಪಾಲನ್ ತಿಳಿಸಿದರು.
ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕುರಿತು ಪತ್ರಿಕಾಗೊಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಸದರಿ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರು ಹಾಗೂ ಅವರ ವಕೀಲರು ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ಸಂಧಾನ ಮೂಲಕ ಬಗೆಹರಿಸಿಕೊಳ್ಳುವ ಅವಕಾಶವಿರುತ್ತದೆ. ಸದರಿ ಪರ್‍ಯಾಯ ನ್ಯಾಯ ವಿತರಣೆ ಜನಮನ್ನಣೆ ಪಡೆದುಕೊಂಡಿದ್ದು, ಅದರಲ್ಲಿ ಉಭಯ ಪಕ್ಷಗಾರರು ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಮುಕ್ತ ಅವಕಾಶವಿರುತ್ತದೆ. ಸದರಿ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಚಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜಿ ಮಾಡಿಕೊಳ್ಳುವ ಕುರಿತು ತಿಳಿಸುವ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು ಎಂದರು.
ಸದರಿ ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಿವಿಲ್ ಪ್ರಕರಣಗಳು, ರಾಜಿಯಾಗುವ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೈಮ್‌ಗಳು, ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನೆಯನ್ನು ಹೊರತು ಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ, ನ್ಯಾಯಾಧೀಕರಣ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯಗಳಲ್ಲಿ ಪ್ರಕರಣಗಳು, ಕಾರ್ಮಿಕರ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದಂತೆ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು ಮತ್ತು ಜೀವನಾಂಶ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವ ಅವಕಾಶವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ತಿಳಿಸಿದರು.
ಈ ಹಿಂದೆ ದಿನಾಂಕ ೦೮-೦೭-೨೦೨೩ ರಂದು ನಡೆದ ಜನತಾ ನ್ಯಾಯಾಲಯದಲ್ಲಿ ಒಟ್ಟು ೭೧೪೩ ಕೋಲಾರ ಜಿಲ್ಲೆಯ ನ್ಯಾಯಾಲಯಗಳಲ್ಲಿದ್ದ ಚಾಲ್ತಿ ಪ್ರಕರಣಗಳು ಹಾಗೂ ೩೫೦೨ ವ್ಯಾಜ್ಯ ಪೂರ್ವ ಬ್ಯಾಂಕ್ ಪ್ರಕರಣಗಳು ಸೇರಿ ಒಟ್ಟು ೧೦೬೪೫ ಪ್ರಕರಣಗಳು ರಾಜಿ ಮೂಲಕ ಮುಕ್ತಾಯಗೊಂಡಿರುತ್ತವೆ. ಸದರಿ ಜನತಾ ನ್ಯಾಯಾಲಯದಲ್ಲಿ ಒಟ್ಟು ರೂ.೨೬,೧೮,೩೪,೪೫೩-೦೦ ಪರಿಹಾರದ ಹಣ ರಾಜಿ ಮೂಲಕ ಪಾವತಿಯಾಗಿರುತ್ತದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್.ಹೊಸಮನಿ, ವಕೀಲರ ಸಂಘದ ಅಧ್ಯಕ್ಷ ಮುನೇಗೌಡ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.