ಸೋಂಕಿತರ ದುಸ್ಥಿತಿಗೆ ಕೇಂದ್ರ ಕಾರಣ ರಾಹುಲ್ ಟೀಕೆ


ನವದೆಹಲಿ, ಏ.೨೩- ದೇಶದಲ್ಲಿ ಕೊರೊನಾ ಸೋಂಕಿತರಿಗೆ ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳ ಕೊರತೆಯಾಗಲು ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ವಿಫಲವಾಗಿರುವುದೇ ಸಮಸ್ಯೆಗಳು ಮತ್ತೆ ಮತ್ತೆ ಕಾಣಿಸಿಕೊಳ್ಳಲು ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ಐಸಿಯು ಹಾಸಿಗೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ದಿನನಿತ್ಯ ಸಾವಿರಾರು ಜನರು ಸಾಯುತ್ತಿದ್ದಾರೆ ಇದಕ್ಕೆಲ್ಲ ನೇರವಾಗಿ ಕೇಂದ್ರ ಸರ್ಕಾರವೇ ಹೊಣೆ ಎಂದು ಅವರು ಹೇಳಿದ್ದಾರೆ.
ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಕಳೆದ ೨೪ ಗಂಟೆಗಳಲ್ಲಿ ಆಮ್ಲಜನಕ ಸಿಗದೇ ೨೫ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಅದೇರೀತಿ ವಿವಿಧ ರಾಜ್ಯಗಳಲ್ಲಿ ಪರಿಸ್ಥಿತಿ ಇದೆ ಎಂದು ಅವರು ತಿಳಿಸಿದ್ದಾರೆ
ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ನಿತ್ಯ ಹೆಚ್ಚಾಗುತ್ತಿದೆ ಅದನ್ನು ತಡೆಗಟ್ಟಲು ಸಮರ್ಪಕವಾದ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಮತ್ತು ಸಾವಿನ ಸಂಖ್ಯೆ ಏರಿಕೆಯಾಗಲು ಕಾರಣ ಎಂದು ಅವರು ದೂರಿದ್ದಾರೆ.
ದೇಶದಲ್ಲಿ ಕಾಣಿಸಿಕೊಂಡ ಮೊದಲ ಅಲೆಯ ಕೊರೋನಾ ಸೋಂಕಿನಿಂದ ಪಾಠ ಕಲಿಯದ ಹಿನ್ನೆಲೆಯಲ್ಲಿ ಎರಡನೇ ಅಲೆ ವಿಪರೀತವಾಗಿ ಹೆಚ್ಚಾಗುತ್ತದೆ ಇದಕ್ಕೆಲ್ಲ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ಆಮ್ಲಜನಕ ಮತ್ತು ಐಸಿಯು ಹಾಸಿಗೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ವೈದ್ಯಕೀಯ ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಸೋಂಕು ದೇಶದಲ್ಲಿ ಹೆಚ್ಚಾಗುತ್ತಿದ್ದರೂ ಅದಕ್ಕೆ ಕಡಿವಾಣ ಹಾಕಲು ಗಮನಕೊಡದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮಬಂಗಾಳ ವಿಧಾನಸಭೆಯಚುನಾವಣಾ ಪ್ರಚಾರಕ್ಕೆ ಒತ್ತು ನೀಡಿದ್ದಾರೆ.ಜನರು ಇಂದಿಗೂ ಕೂಡ ಅವರನ್ನು ಕ್ಷಮಿಸುವುದಿಲ್ಲ ಎಂದು ಅವರು ಹೇಳಿದ್ದಾರೆ