ಸೋಂಕು ತಡೆಗೆ ಕಠಿಣ ಕ್ರಮ; ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಜಾರಿ

ಬೆಂಗಳೂರು, ಏ.8- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಶನಿವಾರದಿಂದ ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇಂದು ಕೂಡ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ತನಕ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ.ಕೊರೊನಾ ಕರ್ಫ್ಯೂ ಎಂದು ಕರೆಯುವಂತೆ ಪ್ರಧಾನಿ‌ ಸೂಚಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಕೊರೋನಾ ಕರ್ಫ್ಯೂ ಎಂದು ಕರೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯ ಬಳಿಕ ಯಡಿಯೂರಪ್ಪ ಈ ವಿಷಯ ಪ್ರಕಟಿಸಿದ್ದಾರೆ.

ರಾಜ್ಯದ ಏಳು ಜಿಲ್ಲೆಗಳ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ .ಅದರಲ್ಲಿ ಬೆಂಗಳೂರು ನಗರ, ತುಮಕೂರು, ಮಂಗಳೂರು, ಉಡುಪಿ ಮಣಿಪಾಲ, ಕಲಬುರಗಿ, ಮೈಸೂರು, ಬೀದರ್ ನಗರಗಳಲ್ಲಿ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನು ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಜನರು ಬೇಕಾಬಿಟ್ಟಿ ಓಡಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಜೊತೆಗೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಮುಂಗಡವಾಗಿ ಟಿಕೆಟ್ ಬುಕಿಂಗ್ ಮಾಡಿದವರಿಗೆ ಮಾತ್ರ ಬಸ್ ಗಳಲ್ಲಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಲಾಗುವುದು ಉಳಿದಂತೆ ಎಲ್ಲಾ ಬಸ್ ಸಂಚಾರವನ್ನು ನಿಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.