ಸೋಂಕು ತಡೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ, ಮಾ.೩೧- ದೇಶದಲ್ಲಿ ದಿನನಿತ್ಯ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಕಂಟೋನ್ಮೆಂಟ್ ವಲಯಗಳನ್ನು ಗುರುತು ಮಾಡುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕಂಟೋನ್ಮೆಂಟ್ ವಲಯಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಬಿಗಿ ಭದ್ರತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಸೋಂಕು ಹೆಚ್ಚಿನ ಜನರಿಗೆ ಹರಡದಂತೆ ತಡೆಯಲು ಹೆಚ್ಚಿನ ಜನರಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಬೇಕು ಜೊತೆಗೆ ಸೋಂಕಿತರು ಕಂಡುಬಂದರೆ ಅವರ ಜೊತೆಯಲ್ಲಿರುವ ಸಂಪರ್ಕ ಪತ್ತೆ ಹಚ್ಚಿ ಸೋಂಕು ಇದೆಯೇ ಇಲ್ಲವೇ ಎನ್ನುವುದನ್ನು ಪತ್ತೆ ಮಾಡುವ ಜೊತೆಗೆ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದೆ.
ಕೊರೊನಾ ಸೋಂಕು ಸಂಖ್ಯೆ ದಿನನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಸ್ಥಿತಿ ಕೈಮೀರುವ ಸಾಧ್ಯತೆಗಳಿವೆ. ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
ಸೋಂಕಿತರನ್ನು ಪತ್ತೆ ಮಾಡಿ ಅವರನ್ನು ಕ್ವಾರಂಟೈನ್‌ನಲ್ಲಿ ಇಡುವುದು ಸೇರಿದಂತೆ ಅಗತ್ಯ ಚಿಕಿತ್ಸೆ ನೀಡುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಶೇ.೧೦೦ ರಷ್ಟು ಲಸಿಕೆಗೆ ಸೂಚನೆ:
ದೇಶದಲ್ಲಿ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಲವತ್ತೈದು ವರ್ಷ ದಾಟಿದ ಎಲ್ಲರಿಗೂ ಲಸಿಕೆ ನೀಡಿಕೆ ಕಾರ್ಯಕ್ರಮವಾಗಿದ್ದು ಈ ಅಭಿಯಾನದಲ್ಲಿ ಶೇಕಡ ನೂರರಷ್ಟು ಪ್ರಗತಿ ಸಾಧಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಮುಂದಿನ ಎರಡು ವಾರಗಳ ಅವಧಿಯಲ್ಲಿ ನಲವತ್ತೈದು ವರ್ಷ ದಾಟಿದ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.
ದೇಶದ ೪೬ ಜಿಲ್ಲೆಗಳಲ್ಲಿ ನಿತ್ಯ ಸೋಂಕು ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಅದರಲ್ಲಿ ಬೆಂಗಳೂರು ನಗರ ಜಿಲ್ಲೆ ಕೂಡ ಒಂದಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸಲು ಮುಂದಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ.

ಬೆಂಗಳೂರು ಸಕ್ರಿಯ ಪ್ರಕರಣ ಏರಿಕೆ
ಬೆಂಗಳೂರು ನಗರದಲ್ಲಿ ದಿನನಿತ್ಯದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಮಾಣವನ್ನು ಹೆಚ್ಚು ಮಾಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಸರಿಸುಮಾರು ಹದಿನಾರು ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಮಾಣವನ್ನು ಮತ್ತಷ್ಟು ಹೆಚ್ಚು ಮಾಡಿ ಸೋಂಕು ಹರಡುವುದನ್ನು ತಪ್ಪಿಸಬೇಕು ಎಂದು ಅವರು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ