ಸೋಂಕು ತಡೆ ಸರ್ಕಾರ ವಿಫಲ ಪಾಟೀಲ್ ಟೀಕೆ

ಬೆಂಗಳೂರು.ಏ.೨೦- ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ವಿಫಲವಾಗಿರುವ ಸರ್ಕಾರ, ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿ ಇರಬೇಕೆಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕೊರೊನಾದಿಂದ ಸಂಭವಿಸುತ್ತಿರುವ ಪ್ರತಿ ಸಾವು ಕೂಡ ಸರ್ಕಾರಿ ಪಾಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ.
ಕೊರೊನಾ ೨ನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ ನಂತರವೂ ಎಚ್ಚೆತ್ತುಕೊಳ್ಳದ ಸರ್ಕಾರದಿಂದ ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ, ವೆಂಟಿಲೆಟರ್ ಕೊರತೆ ಇಂದ ಜನ ಸಾಯುವ ಪರಿಸ್ಥಿತಿ ಸೃಷ್ಟಿಯಾಗಿದೆ,
ಜನರಿಗೆ ಕನಿಷ್ಠ ಚಿಕಿತ್ಸೆಯನ್ನೂ ನೀಡಲಾಗದ ಈ ಸರ್ಕಾರ ಯಾವ ಪುರುಷಾರ್ಥಕ್ಕೆ ಬೇಕು ಎಂಬುದು ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.
ಸರ್ಕಾರ ಜನರ ಜೀವದ ಜತೆ ಚೆಲ್ಲಾಟವಾಡುವುದನ್ನು ಬಿಟ್ಟು ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಸೋಂಕಿತರಿಗೆ ಬೆಡ್, ಆಕ್ಸಿಜನ್ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.