ಸೋಂಕು ನಿಗ್ರಹ ರಾಮನಗರದಲ್ಲಿ ನಿಷೇಧಾಜ್ಞೆ ಜಾರಿ

ರಾಮನಗರ, ಮಾ.೩೦- ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ತಕ್ಷಣದಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ಸಿಆರ್‌ಪಿಸಿ ಸೆಕ್ಷನ್ ೧೪೪ ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಬಂಧನೆ ಹಾಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಮುಂದಿನ ಆದೇಶದವರೆಗೆ ರಾಮನಗರದಲ್ಲಿ ನಿಷೇಧಾಜ್ಞೆ ಮುಂದುವರಿದಿರುತ್ತದೆ. ಇನ್ನೂ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ಮೈದಾನ, ಉದ್ಯಾನಗಳು, ಮಾರುಕಟ್ಟೆಗಳಲ್ಲಿ, ಧಾರ್ಮಿಕ ಸ್ಥಳಗಳು ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಸಭೆ – ಸಮಾರಂಭಗಳನ್ನು ಆಚರಿಸುವುದನ್ನು ಮತ್ತು ಆಯೋಜಿಸುವುದನ್ನು ನಿಷೇಧಿಸಲಾಗಿದೆ.
ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆಗಳು, ಮೇಳಗಳನ್ನು ನಿಷೇಧಿಸಿದೆ. ಎಲ್ಲ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಮೂಹಿಕವಾಗಿ ಗುಂಪು ಸೇರದೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೇಂದ್ರ ಹಾಗೂ ರಾಜ್ಯ ಮತ್ತು ಜಿಲ್ಲಾಡಳಿತದಿಂದ ಕೋವಿಡ್ ತಡೆಗಟ್ಟುವ ಸಂಬಂಧ ಹೊರಡಿಸಿರುವ ನಿಯಮ ಮತ್ತು ನಿಬಂಧನೆಗೆ ಒಳಪಟ್ಟು ಸಾಂಕೇತಿಕವಾಗಿ ಆಚರಣೆ ಮಾಡಲು ಸೂಚಿಸಲಾಗಿದೆ.
ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಉಲ್ಲಂಘಿಸಿದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ನಿರ್ದೇಶಿಸಿದ್ದಾರೆ.
ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಕಲಂ ೫೧ ರಿಂದ ೬೦ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ ೧೮೮ರ ರೀತಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಮನಗರ ಡಾ.ರಾಕೇಶ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.