ಸೋನಿಯಾಗಾಂಧಿ ಇಡಿ ವಿಚಾರಣೆ ಖಂಡಿಸಿ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಮೌನ ಸತ್ಯಾಗ್ರಹ

ಕಲಬುರಗಿ.ಜು.27: ಎಐಸಿಸಿಐ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ ಅವರಿಗೆ ಇಡಿ ವಿಚಾರಣೆ ಕೈಗೊಂಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಟೌನ್ ಹಾಲ್ ಮುಂದಿರುವ ಮಹಾತ್ಮಾಗಾಂಧಿ ಪ್ರತಿಮೆಯ ಕೆಳಗಡೆ ಮೌನ ಸತ್ಯಾಗ್ರಹ ಮಾಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ಮಾತನಾಡಿ, ಕೇಂದ್ರದಲ್ಲಿನ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರದಂತೆ ತಡೆಯುತ್ತಿದೆ ಎಂದು ಆರೋಪಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯ ಮೂಲಕ ಎಐಸಿಸಿಐ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿ ಅವರಿಗೆ ಕೇಂದ್ರ ಸರ್ಕಾರವು ಕಿರುಕುಳ ಕೊಡುತ್ತಿದೆ. ಪ್ರಕರಣವು ಈಗಾಗಲೇ ಮುಕ್ತಾಯಗೊಂಡಿತ್ತು. ಈಗ ಆ ಪ್ರಕರಣವನ್ನು ಮತ್ತೆ ತನಿಖೆ ನಡೆಸುತ್ತಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚುತ್ತಿವೆ. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುತ್ತಿದೆ. ಆದಾಗ್ಯೂ, ಆ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳದೇ ದೇಶದ ಜನರ ದೃಷ್ಟಿಯನ್ನು ಬೇರೆಡೆ ಸೆಲೆಯಲು ತನಿಖಾ ಸಂಸ್ಥೆಯ ಮೂಲಕ ಕಾಂಗ್ರೆಸ್ಸಿಗರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಮುಖಂಡರಾದ ರಾಜಗೋಪಾಲರೆಡ್ಡಿ ಮುದಿರಾಜ್, ಚಂದ್ರಶೇಖರ್ ಸುಲ್ತಾನಪುರ, ಬಾಬುರಾವ್ ಜಹಾಗೀರದಾರ್, ಈರಣ್ಣ ಝಳಕಿ, ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹಾಗೂ ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಲತಾ ರವಿ ರಾಠೋಡ್, ರೇಣುಕಾ ಸಿಂಗೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.