
ಬೆಂಗಳೂರು, ಮಾ. ೧೭- ಪಕ್ಷದಲ್ಲಿ ತಮಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲವೆಂದು ಅಸಮಾಧಾನಗೊಂಡಿದ್ದ ಸಚಿವ ವಿ. ಸೋಮಣ್ಣ ಅವರನ್ನು ಪಕ್ಷದ ಹೈಕಮಾಂಡ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಚಾಮರಾಜನಗರ ಸೇರಿದಂತೆ ಹಳೇ ಮೈಸೂರು ಭಾಗದ ಕೆಲ ಜಿಲ್ಲೆಗಳ ಚುನಾವಣಾ ಜವಾಬ್ದಾರಿಯನ್ನು ಸೋಮಣ್ಣನವರಿಗೆ ನೀಡಲು ಹೈಕಮಾಂಡ್ ಮುಂದಾಗಿದೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರ ಬಗ್ಗೆ ಸಿಟ್ಟುಗೊಂಡಿದ್ದ ಸೋಮಣ್ಣನವರು ನಿನ್ನೆ ದೆಹಲಿಗೆ ತೆರಳಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀವು ಹಿರಿಯರಿದ್ದೀರಿ, ನಿಮ್ಮನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ನಿಮ್ಮ ಅಪೇಕ್ಷಗೆ ತಕ್ಕಂತೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆಗಳ ಉಸ್ತುವಾರಿಯನ್ನು ನೀಡಲಾಗುವುದು. ಪಕ್ಷದ ಗೆಲುವಿಗೆ ಕೆಲಸ ಮಾಡಿ ಎಂದು ಹೇಳಿದ್ದಾರೆ.
ಈ ಭೇಟಿ ಸಂದರ್ಭದಲ್ಲಿ ಸೋಮಣ್ಣನವರು ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಕೆಲ ಬೆಳವಣಿಗೆಗಳನ್ನು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದು, ಎಲ್ಲವನ್ನು ಇತ್ಯರ್ಥಪಡಿಸುತ್ತೇವೆ. ತಲೆಕೆಡಿಸಿಕೊಳ್ಳಬೇಡಿ, ನಿಮ್ಮ ಶಕ್ತಿ ಗೊತ್ತಿದೆ. ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಹೇಳಿದರು ಎಂದು ಹೇಳಲಾಗಿದೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸೋಮಣ್ಣ ಅವರು ಜಿಲ್ಲೆಯಲ್ಲಿ ಕೆಲ ನಾಯಕರ ಹಸ್ತಕ್ಷೇಪದಿಂದ ಬೇಸತ್ತಿದ್ದರು. ಜತೆಗೆ ವಿಜಯಸಂಕಲ್ಪ ಯಾತ್ರೆಯ ನೇತೃತ್ವವನ್ನು ನೀಡದೇ ಇದ್ದುದಕ್ಕೆ ಬೇಸರಗೊಂಡು ಚಾಮರಾಜನಗರದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಭೆಗೂ ಗೈರು ಹಾಜರಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದರು.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ ಸ್ಪಷ್ಟನೆ ನೀಡಿದ್ದ ಸೋಮಣ್ಣನವರು ನಾನು ಕಾಂಗ್ರೆಸ್ ಸೇರಲ್ಲ, ಬಿಜೆಪಿಯಲ್ಲೇ ಇರುತ್ತೇನೆ ಎಂದು ಹೇಳಿದ್ದರು.
ಸೋಮಣ್ಣನವರ ಜತೆ ಮುಖ್ಯಮಂತ್ರಿ ಬಸವರಾಜು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಚರ್ಚೆ ನಡೆಸಿ ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದರು.
ಈ ಎಲ್ಲ ಬೆಳವಣಿಗೆಗಳ ನಂತರ ಸೋಮಣ್ಣನವರು ನಿನ್ನೆ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.