ಸ್ಪರ್ಶ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸಿ-ಸಿಇಓ

ರಾಯಚೂರು.ಜ.೩೧- ಸ್ಪರ್ಶ ಕುಷ್ಠರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಜನರಲ್ಲಿ ಕುಷ್ಠರೋಗವನ್ನು ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದೆ ಎಂಬ ಅರಿವನ್ನು ಮೂಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಹೇಳಿದರು.
ಅವರು ಜ.೩೦ರ(ಮಂಗಳವಾರ) ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಷ್ಠರೋಗವನ್ನು ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದ್ದು, ಸಾರ್ವಜನಿಕರು ರೋಗ ಲಕ್ಷಣಗಳು ಕಂಡುಬಂದಲ್ಲಿ ಭಯಪಡದೇ ಹತ್ತಿರದ ಆರೋಗ್ಯ ಕೇಂದ್ರ, ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಕುಷ್ಠರೋಗವನ್ನು ಚಿಕಿತ್ಸೆಯಿಂದ ಗುಣಪಡಿಸಬಹದಾಗಿದೆ ಎಂದು ತಿಳಿಸಿದರು.
ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಇಂದಿನಿಂದ ಫೆ.೧೩ರವರೆಗೆ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಮೂಲಕ ಜನರಲ್ಲಿ ಕುಷ್ಠರೋಗದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪಂಚಾಯತಿ ಮಟ್ಟದಲ್ಲಿ ನಡೆಯುವ ಗ್ರಾಮಸಭೆ, ಶಾಲೆ, ಧಾರ್ಮಿಕ ಸ್ಥಳಗಳು, ನಗರ ಪ್ರದೇಶಗಳ ಸ್ಲಮ್ ಪ್ರದೇಶಗಳಲ್ಲಿ ಅರಿವು ಮೂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಶಾ ಕಾರ್ಯಕರ್ತೆಯರು ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಶಾಲಾ ಶಿಕ್ಷಕರ ಮೂಲಕ ಅರಿವು ಮುಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ವೈದ್ಯಾಧಿಕಾರಿಗಳು, ಅಧಿಕಾರಿಗಳು ಹಾಗೂ ತಂಡಗಳಿಗೆ ಪ್ರಶಸ್ತಿಪತ್ರವನ್ನು ವಿತರಿಸಲಾಯಿತು. ಕುಷ್ಠ ರೋಗವನ್ನು ತಡೆಗುವ ಕುರಿತು ಪ್ರತಿಜ್ಞಾನ ವಿಧಿಯನ್ನು ವಾಚನ ಮಾಡಲಾಯಿತು. ಕಾರ್ಯಕ್ರಮಕ್ಕೂ ಮೊದಲು ಹುತಾತ್ಮ ದಿನಾಚರಣೆ ಅಂಗವಾಗಿ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಯ ಅಧಿಕಾರಿ ಡಾ.ಸುರೇಂದ್ರಬಾಬು, ಕುಟುಂಬ ಕಲ್ಯಾಣಾಧಿಕಾರಿ ಶಿವಕುಮಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ.ಯಶೋಧಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ಶರಣಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.