ಸ್ವಂತ ಬಲದಲ್ಲಿ ಅಧಿಕಾರದ ಗುರಿ ಇರಲಿ: ಅಮಿತ್ ಶಾ ಸೂಚನೆ

ಚೆನ್ನೈ, ನ.22- ಮುಂದಿನ 5 ವರ್ಷಗಳ ಬಳಿಕ ಬಿಜೆಪಿ ತನ್ನ ಸ್ವಂತ ಬಲದಲ್ಲಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಮಿಳುನಾಡು ಬಿಜೆಪಿ ಘಟಕಕ್ಕೆ ಸೂಚನೆ ನೀಡಿದ್ದಾರೆ.

ತಮಿಳುನಾಡು ಘಟಕದ ಬಿಜೆಪಿ ಪದಾಧಿಕಾರಿಗಳೊಂದಿಗೆ ಮಾತನಾಡಿದ ಅವರು ದ್ರಾವಿಡ ಪಕ್ಷದ ಸರ್ಕಾರವನ್ನು ಪಕ್ಕಕ್ಕಿಟ್ಟು ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಸಂದೇಶ ರವಾನಿಸಿದ್ದಾರೆ.

ಮುಂದಿನ ವರ್ಷ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಆಡಳಿತರೂಢ ಎಐಎಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಿದ್ಧರಾದರೂ ಐದು ವರ್ಷಗಳ ನಂತರ ಬಿಜೆಪಿ ಸ್ವಂತ ಬಲದಲ್ಲಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಬೇಕು ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯ ಪದಾಧಿಕಾರಿಗಳು ವಿವಿಧ ಘಟಕಗಳ ಉಸ್ತುವಾರಿಗಳು ಸೇರಿದಂತೆ ಇನ್ನಿತರೆ ಪ್ರಮುಖರೊಂದಿಗೆ ಸಭೆ ನಡೆಸಿದ ಅವರು ಮುಂದಿನ ಐದು ವರ್ಷದ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಸಂಬಂಧ ಪಕ್ಷದ ಅಧ್ಯಕ್ಷ ಜೆ .ಪಿ ನಡ್ಡಾ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿ ಎಂದು ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಬೇಕೆಂದು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಬೇಕು ಎನ್ನುವುದನ್ನು ಪಕ್ಷದ ಅಧ್ಯಕ್ಷರು ಹಾಗೂ ಅವರ ನಾಯಕರು ತೆಗೆದುಕೊಳ್ಳಲಿದ್ದಾರೆ ನೀವು ಪಕ್ಷ ಸಂಘಟನೆ ಮಾಡುವ ಕಡೆ ಮಾತ್ರ ಗಮನಹರಿಸಿ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳುನಾಡು ರಾಜ್ಯಕ್ಕೆ ಸಹಸ್ರಾರು ಕೋಟಿ ರೂಪಾಯಿಗಳ ಯೋಜನೆಯನ್ನು ನೀಡಿದೆ ಅದನ್ನು ಮುಂದಿಟ್ಟುಕೊಂಡು ರಾಜ್ಯದ ಪ್ರತಿ ಹಳ್ಳಿಗೆ ತೆರಳಿ ಪಕ್ಷವನ್ನು ಬಲಪಡಿಸಿ ಎಂದು ಸೂಚಿಸಿದ್ದಾರೆ