ಸ್ವಚ್ಛತೆ ಕಾಪಾಡುವಲ್ಲಿ ಸಮುದಾಯದ ಸಹಭಾಗಿತ್ವ ಅತ್ಯಗತ್ಯ: ಜಿಲ್ಲಾಧಿಕಾರಿ

ಸಂಜೆವಾಣಿ ನ್ಯೂಸ್
ಮೈಸೂರು : ಸೆ.28:-ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದ್ದು, ಸ್ವಚ್ಛತೆ ಕಾಪಾಡುವಲ್ಲಿ ಸಮುದಾಯದ ಸಹಭಾಗಿತ್ವ ಅತ್ಯಗತ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು
ಇಂದು ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾ ಪಂಚಾಯತ್, ಸ್ವಚ್ಚ ಭಾರತ್ ಮಿಷನ್ ಹಾಗೂ ಐ ಟಿ ಸಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ -2023 ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ, ಸ್ವಚ್ಛತಾ ಹಿ ಸೇವಾ ಜಾಗೃತಿ ಕಾರ್ಯಕ್ರಮ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೈಸೂರು ನಗರವನ್ನು ಮಾತ್ರ ಸ್ವಚ್ಛವಾಗಿ ಇಟ್ಟುಕೊಂಡು ಗ್ರಾಮೀಣ ಬಾಗವನ್ನು ಸಹ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮ ಪಂಚಾಯತಿ ಅದ್ಯಕ್ಷರು ಹಾಗೂ ಸದಸ್ಯರು ಸ್ವಚ್ಚತೆ ಕಾಪಾಡಲು ಕೈ ಜೋಡಿಸಬೇಕು. ಕೆಲವು ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.
ಯುವ ಜನತೆಗೆ ಸ್ವಚ್ಛತೆಯ ಅರಿವು ಮೂಡಿಸಬೇಕು. ಶಾಲೆ ಅಂಗನವಾಡಿಗಳಲ್ಲಿ ಮಕ್ಕಳಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು. ಮುಂದಿನ ಪೀಳಿಗೆಗೆ ಸ್ವಚ್ಚ ಪರಿಸರವನ್ನು ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ರಾಯಬಾರಿಗಳಾಗಿ ಕಾರ್ಯ ನಿರ್ವಹಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೊಬ್ಬರೂ ತ್ಯಜಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಮಾತನಾಡಿ ಗ್ರಾಮ ಪಂಚಾಯಿತಿಗಳಲ್ಲಿ ಕಸ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು. ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳಿಗೆ ಚಿಕ್ಕಂದಿನಿoದಲೇ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಬೇಕು. ನಾವು ಪ್ಲಾಸ್ಟಿಕ್ ಬಳಕೆಯನ್ನು ಬಿಡಬೇಕು ಎಂದು ಕಿವಿ ಮಾತು ಹೇಳಿದರು.
ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಛತೆ ನಿರ್ವಹಣೆಗೆ ವಾಹನವನ್ನು ನೀಡಲಾಗಿದೆ. ಗ್ರಾಮಗಳಿಗೆ ತೆರಳಿ ಕಸ ಸಂಗ್ರಹಣೆ ಮಾಡಿ ಘನ ತ್ಯಾಜ್ಯ ನಿರ್ವಹಣೆ ಘಟಕಗಳಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿಯೂ ಗ್ರಂಥಾಲಯವನ್ನು ಪ್ರಾರಂಭಿಸಲಾಗಿದೆ. ಗ್ರಂಥಾಲಯಗಳ ಸದಸ್ಯತ್ವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಓದುಗರನ್ನು ನೊಂದಾಯಿಸಿ ಎಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ವೆಲ್ಲೂರು ಶ್ರೀನಿವಾಸನ್ ಅವರು ಘನ ತ್ಯಾಜ್ಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕೃಷ್ಮ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ ಸೇರಿದಂತೆ ಗ್ರಾಮ ಪಂಚಾಯತಿಗಳ ಅದ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.