ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನಲೆ ‘ಹರ್ ಘರ್ ತಿರಂಗಾ’ ಅಭಿಯಾನ ಆ. 11 ರಿಂದ 17 ರ ವರೆಗೆ ; ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಯಾದಗಿರಿ; ಜು, 19 :75ನೇ ಸ್ವಾತಂತ್ರ್ಯೋತ್ಸವ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು “ಹರ್ ಘರ್ ತಿರಂಗಾ “(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಹಾರಿಸಿ ಅಭಿಯಾನ ಹಮ್ಮಿಕೊಂಡಿದ್ದು, ರಾಷ್ಟ್ರ ಧ್ವಜಕ್ಕೆ ಗೌರವ ತರುವ ನಿಟ್ಟಿನಲ್ಲಿ ಶಿಸ್ತಿನಿಂದ ಅಚ್ಚುಕಟ್ಟಾಗಿ ಜಿಲ್ಲೆಯ ನಾಗರಿಕರು ಸಕ್ರೀಯವಾಗಿ ಭಾಗವಹಿಸಿ ಈ ಅಭಿಯಾನ ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ದೇಶದಾದ್ಯಂತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಸರ್ಕಾರವು ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ 11 ರಿಂದ ಆಗಸ್ಟ್ 17 ರ ವರೆಗೆ ದೇಶದ ಪ್ರತಿ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವ ಅಭಿಯಾನ ಹಮ್ಮಿಕೊಂಡಿದೆ ಎಂದರು.

ತಾಲೂಕುಗಳ ತಹಶಿಲ್ದಾರರು ,ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ, ಇವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದರು.

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ ರಾಜ್, ಸ್ವಸಹಾಯ ಒಕ್ಕೂಟಗಳು, ನಾಡಕಚೇರಿ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪಕೇಂದ್ರ, ಸಹಕಾರ ಸಂಘಗಳು, ಉಪ ಅಂಚೆಕಛೇರಿಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಸೇವಕರು, ಶಿಕ್ಷಕರು, ಇನ್ನಿತರ ಸರ್ಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅರೆ ಸರ್ಕಾರಿ ನೌಕರರು, ಸಾರ್ವಜನಿಕರು ತಮ್ಮ ಕುಟುಂಬ ವರ್ಗದವರೊಂದಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳು ಒಳಗೊಂಡ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ರಾಷ್ಟ್ರಧ್ವಜ ಹಾರಿಸುವಾಗ ಹಾಗೂ ಇಳಿಸುವಾಗ ಅನುಸರಿಸಬೇಕಾದ ನಿರ್ದಿಷ್ಟ ಕ್ರಮಗಳ ಮಾಹಿತಿಯನ್ನು ಶಾಲೆ, ಕಾಲೇಜುಗಳ ಎಲ್ಲಾ ಮಕ್ಕಳಿಗೆ ತಿಳಿಸಬೇಕು ಎಂದು ಸಂಬಂಧಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಅಧಿಕಾರಿಗಳು ಜಿಲ್ಲೆಯಲ್ಲಿ ಎಷ್ಟು ಧ್ವಜಗಳು ಬೇಕಾಗುವುದು ಮತ್ತು ರಾಷ್ಟ್ರ ಧ್ವಜಗಳ ಹಂಚಿಕೆ ಮತ್ತು ಮಾರಾಟ ಮಳಿಗೆ ಕೇಂದ್ರಗಳನ್ನು ಎಲ್ಲೆಲ್ಲಿ ಸ್ಥಾಪಿಸಬೇಕು ಎಂದು ಗ್ರಾಪಂ ಮತ್ತು ನಗರ ಪ್ರದೇಶಗಳಲ್ಲಿ ಗುರುತಿಸಿ ವರದಿ ಕೊಡಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಧ್ವಜಗಳನ್ನು ಹಾರಿಸಬಾರದು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರಭಾಕರ್ ಕವಿತಾಳ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಚನ್ನಬಸವ ಎಸ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ವೆಂಕಟೇಶ ಚಟ್ನಳ್ಳಿ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ , ನಗರಾಭಿವೃದ್ಧಿ ಕೋಶ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.