ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ

ಬೀದರ್:ಜ.13: ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು ಎಂದು ಪ್ರಾಚಾರ್ಯ ಪ್ರೊ. ವಿನಾಯಕ ಬಿ. ಕೊತಮಿರ ಸಲಹೆ ಮಾಡಿದರು.
ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು ಇಡೀ ವಿಶ್ವವೇ ಗೌರವಿಸುವಂತಹ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದರು ಎಂದು ನುಡಿದರು.
ಸ್ವಾಮಿ ವಿವೇಕಾನಂದರ ತತ್ವಗಳು ಎಂದೆಂದಿಗೂ ಪ್ರಸ್ತುತವಾಗಿವೆ ಎಂದು ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮಹೇಶಕುಮಾರ ಆರ್. ಹೇಳಿದರು.
ವಿವೇಕಾನಂದರು ಶಿಕಾಗೊದ ಸರ್ವ ಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣ ಅತ್ಯಂತ ಪರಿಣಾಮಕಾರಿ ಭಾಷಣಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಹೇಮಾವತಿ ಪಾಟೀಲ ಮಾತನಾಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂದೀಪ್ ತಿವಾರಿ, ಮಹಮ್ಮದ್ ಮುಸ್ತಫಾ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕಿ ಊರ್ವಶಿ ಕೋಡ್ಲಿ ನಿರೂಪಿಸಿದರು. ಡಾ. ಹೇಮಾವತಿ ಪಾಟೀಲ ವಂದಿಸಿದರು.