ಹಂತ ಹಂತವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ : ಶೆಟ್ಟರ್

ಹುಬ್ಬಳ್ಳಿ ನ 17: ವಿದ್ಯಾರ್ಥಿಗಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಕಾಲೇಜುಗಳ ಪ್ರಾರಂಭಕ್ಕೆ ಹಸಿರು ನಿಶಾನೆ ನೀಡಿದೆ. ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಸದ್ಯ ಕಡಿಮೆ ಇದ್ದು, ಹಂತಹಂತವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳು ಆರಂಭವಾಗಿವೆ. ಕೋವಿಡ್ ಮಧ್ಯೆ ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕಾಲೇಜು ಆರಂಭಕ್ಕೆ ರಾಜ್ಯ ಸರಕಾರ ಅನುಮತಿ ನೀಡಿರುವ ಹಿನ್ನೆಲೆ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಲೇಜು ಆಡಳಿತ ಮಂಡಳಿಗಳು ಕಾಲೇಜುಗಳನ್ನು ಆರಂಭಿಸಿವೆ. ಸದ್ಯ ಕಾಲೇಜಿಗೆ ವಿದ್ಯಾರ್ಥಿಗಳು ಬರದಿದ್ದರೂ, ಮುಂದಿನ ದಿನಗಳಲ್ಲಿ ಹಂತಹಂತವಾಗಿ ವಿದ್ಯಾರ್ಥಿಗಳು ಬರುತ್ತಾರೆ ಎಂದರು.
ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ತಲೆ ಮರೆಸಿಕೊಂಡಿದ್ದ ಮಾಜಿ ಮೇಯರ್ ಸಂಪತ್‍ರಾಜ್ ಬಂಧನದ ಅನಿವಾರ್ಯತೆಯಿತ್ತು. ಸದ್ಯ ಸಂಪತ್‍ರಾಜ್ ಬಂಧನವಾಗಿದ್ದು, ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುವರು. ನಮ್ಮ ಸರ್ಕಾರ ಬಂದ ನಂತರ ಇದುವರೆಗೂ ಎಲ್ಲಾ ಸುವ್ಯವಸ್ಥಿತವಾಗಿ ನಡೆದಿದೆ. ಉಪ ಚುನಾವಣೆಗಳನ್ನು ಗೆದ್ದಿದ್ದೇವೆ. ಸಂಪುಟ ರಚನೆಯೂ ಯಾವುದೇ ಅಡತಡೆಯಿಲ್ಲದೆ ಸುಗಮವಾಗಿ ಆಗುತ್ತದೆ. ಯಾರಿಗೆ ಏನು ಜವಾಬ್ದಾರಿ ಕೊಡಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಸಚಿವ ಶೆಟ್ಟರ್ ನುಡಿದರು.