ಹತ್ಯಾಕಾಂಡಕ್ಕೆ ಕೊನೆ ಇಲ್ಲವೆ; ಎಚ್‌ಡಿಕೆ ಪ್ರಶ್ನೆ

The Chief Minister of Karnataka, Shri H.D. Kumaraswamy meeting the Union Minister for Consumer Affairs, Food and Public Distribution, Shri Ram Vilas Paswan, in New Delhi on October 06, 2018.

ಬೆಂಗಳೂರು, ಜು. ೨೭- ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರೆದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೆ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೊಲೆ ಆದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು, ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಮೇಲೆ ಸರ್ಕಾರ ಮೈ ಮರೆತಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
ಮಂಗಳೂರಿನ ಪ್ರವೀಣ್ ನೆಟ್ಟಾರ್ ಹತ್ಯೆ ಸಂಬಂಧ ಇಂದು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಪ್ರತಿ ಕೊಲೆಯಾದ ಮೇಲೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ ಕೊಲೆಯಾಗದಂತೆ ತಡೆಯುವ ಪ್ರಯತ್ನ ಏಕೆ ಮಾಡುತ್ತಿಲ್ಲ. ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ. ಚುನಾವಣೆ ಹತ್ತಿರವಾದಂತೆ ನೆತ್ತರ ಓಕುಳಿ ಹರಿಯುತ್ತಿದೆ. ಈ ನೆತ್ತರದ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಟ್ವೀಟರ್‌ನಲ್ಲಿ ದೂರಿದ್ದಾರೆ.
ರಾಜ್ಯದ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತಿವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತ ಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಕೋಲೆಯ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೋಳ ಹಾಕಲು ಧೈರ್ಯ ಇಲ್ಲ. ಈ ಅಸಾಯಕತೆಗೆ ಕಾರಣ ಎಂದು ಎಂದು ಅವರು ಪ್ರಶ್ನಿಸಿದ್ದಾರೆ.
ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ ಎಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು. ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶ ಅಡಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಶಾಂತಿ, ಸುವ್ಯವಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆಯಾಗುತ್ತಾರೆ. ನಿರುದ್ಯೋಗವೇ ಇಂತಹ ಘಟನೆಗಳಿಗೆ ಕಾರಣ ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಟ್ವೀಟರ್‌ನಲ್ಲಿ ಹೇಳಿದ್ದಾರೆ.