ಹತ್ಯೆಕೋರರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಅರಸೀಕೆರೆ, ಆ. ೧- ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ವಿ.ಎಚ್.ಪಿ. ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಾಲ್ಲೂಕು ಆಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ವಿ.ಎಚ್.ಪಿ. ಹಾಗೂ ಬಜರಂಗದಳದ ಕಾರ್ಯಕರ್ತರು ಜಮಾಯಿಸಿ ದೇಶ ವಿರೋಧಿಗಳ ವಿರುದ್ಧ ಸರ್ಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹತ್ಯೆ ಆರೋಪಿಗಳನ್ನು ಶೀಘ್ರವೇ ಬಂಧಿಸಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಜರಂಗದಳದ ನಗರ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಅತಿ ಹೆಚ್ಚು ಕೋಮು ಸಂಘರ್ಷ ಪ್ರಕರಣಗಳು ನಡೆದಿದ್ದು, ಕೆಲವು ಪ್ರಕರಣಗಳು ತನಿಖೆ ಹಂತದಲ್ಲಿವೆ. ಇನ್ನು ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ತನಿಖಾಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸಾಕ್ಷ್ಯ ಕೊರತೆ ಕಾರಣ ಅನೇಕ ಪ್ರಕರಣಗಳು ವಜಾಗೊಂಡಿರುವುದರಿಂದ ದೇಶದ್ರೋಹಿಗಳ ಹೇಯ ಕೃತ್ಯ ಸಮಾಜದಲ್ಲಿ ಮುಂದುವರೆದಿದೆ ಎಂದರು.
ನಗರ ಬಿಜೆಪಿ ಅಧ್ಯಕ್ಷ ಪುರುಷೋತ್ತಮ ಮಾತನಾಡಿ, ಸಂಘಪರಿವಾರ ಹಿಂದೂ ಪರ ಹೋರಾಟಗಾರರು ಹಾಗೂ ಕಾರ್ಯಕರ್ತರ ಹತ್ಯೆ ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದೆ. ಜಿಹಾದಿ ಮನಸ್ಥಿತಿಯ ಹಂತಕರಿಗೆ ಸರ್ಕಾರ ಕಡಿವಾಣ ಹಾಕುವುದರಲ್ಲಿ ವಿಫಲವಾಗಿದೆ. ಹಂತಕರನ್ನು ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು.
ಗಣೇಶೋತ್ಸವ ಸೇರಿದಂತೆ ಇತರೆ ಸಂದರ್ಭದಲ್ಲಿ ಹಿಂದೂಪರ ಕಾರ್ಯಕರ್ತರ ಮೇಲೆ ಪೊಲೀಸರು ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಂ.ಜಿ.ಲೋಕೇಶ್, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಶೇಖರ್ ಯಾದವ್, ವಿನೋದ್ ಕುಟ್ಟಿ ಮತ್ತಿತರರು ಭಾಗವಹಿಸಿದ್ದರು.