ಹರ್ತಾಸ್ ಬಾಲಕಿಯ ಮೇಲೆ ಅತ್ಯಾಚಾರ

ಹರ್ತಾಸ್,ಏ.೨- ಉತ್ತರಪ್ರದೇಶದ ಹರ್ತಾಸ್ ನಲ್ಲಿ ಕಳೆದ ವರ್ಷ ದಲಿತ ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣ ಹಸಿಯಾಗಿರುವಾಗಲೇ ಇದೀಗ ಮತ್ತೆ ಅಲ್ಲಿಯೇ ಇನ್ನೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದೆ.

ಮಾರ್ಚ್ ೨೯ರಂದು ಹೋಳಿಹಬ್ಬದ ಸಂದರ್ಭದಲ್ಲಿ ಮೂವರು ಯುವಕರು ೧೬ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಅಮಾನುಷ ಘಟನೆ ನಡೆದಿದ್ದು ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಪೈಶಾಚಿಕ ಕೃತ್ಯಕ್ಕೆ ಸಾಕ್ಷಿಯಾಗಿದೆ.

ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ನಡೆಸಿದ ಹಿನ್ನೆಲೆಯಲ್ಲಿ ಆಕೆ ಪ್ರಜ್ಞೆ ತಪ್ಪಿದ್ದಾಳೆ. ಮಾರನೆಯ ದಿನ ಆರೋಪಿಗಳು ಯುವತಿಯನ್ನು ಆಕೆಯ ಹಳ್ಳಿಯ ಬಳಿ ಬಿಟ್ಟು ಪರಾರಿಯಾಗಿದ್ದಾರೆ.

ಈ ಸಂಬಂಧ ಬಾಲಕಿಯ ಪೋಷಕರು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ .ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಗುರುತಿಸಲಾಗಿದೆ ಆದರೂ ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹರ್ತಾಸ್ ನ ಪೊಲೀಸ್ ವರಿಷ್ಠಾಧಿಕಾರಿ ವಿನಯ್ ಜೈಸ್ವಾಲ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ