‘ಹರ್ ಘರ್ ತಿರಂಗಾ’ ಅಭಿಯಾನ ಯಶಸ್ವಿಗೊಳಿಸಲು ಸಚಿವ ಪ್ರಭು ಚವ್ಹಾಣ ಮನವಿ

ಬೀದರ:ಜು.20:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆಗಸ್ಟ್ 11 ರಿಂದ 17ರವರೆಗೆ ಹಮ್ಮಿಕೊಂಡಿರುವ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಸಂಖ್ಯಾತ, ತ್ಯಾಗ, ಬಲಿದಾನ ಮತ್ತು ಹೋರಾಟಗಳ ಫಲವಾಗಿ ದಾಸ್ಯದ ಸಂಕೋಲೆಯಿಂದ ಭಾರತ ದೇಶವು ಸ್ವಾತಂತ್ರ್ಯಗೊಂಡು ಈಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮಕ್ಕೆ ಕಾರಣೀಕರ್ತರಾದ ಎಲ್ಲ ಮಹನೀಯರ ತ್ಯಾಗ, ಬಲಿದಾನ ಮತ್ತು ಹೋರಾಟಗಳನ್ನು ಸ್ಮರಿಸುವ ಜೊತೆಗೆ ಎಲ್ಲರಲ್ಲಿಯೂ ದೇಶಪ್ರೇಮವನ್ನು ಜಾಗೃತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅತ್ಯಂತ ಮಹತ್ವದ ಅಭಿಯಾನವನ್ನು ರೂಪಿಸಿದ್ದಾರೆ.

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕರ್ನಾಟಕದಲ್ಲಿ ಅಭಿಯಾನ ಯಶಸ್ವಿಗೊಳಿಸಲು ಮುಂದಾಗಿದ್ದಾರೆ. ರಾಜ್ಯಾದ್ಯಂತ 1 ಕೋಟಿ ರಾಷ್ಟ್ರಧ್ವಜ ಹಾರಿಸುವ ಉದ್ದೇಶ ಹೊಂದಿದ್ದು, ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಅದರಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಪೆÇಲೀಸ್ ಇಲಾಖೆಯ ನೇತೃತ್ವದಲ್ಲಿ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗುತ್ತಿದೆ.

ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಈಗಾಗಲೇ ಸುತ್ತೊ?ಲೆಗಳನ್ನು ನೀಡಲಾಗಿದ್ದು, ಶಾಲಾ, ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ಅಗತ್ಯ ನಿರ್ದೇಶನ ನೀಡಲಾಗಿದೆ. ಎನ್‍ಸಿಸಿ, ಎನ್‍ಎಸ್‍ಎಸ್, ಸ್ವಯಂ ಸೇವಕರು, ಮಾಜಿ ಸೈನಿಕರು, ಸಂಘ ಸಂಸ್ಥೆಗಳು ಕಾರ್ಯಕ್ರಮದ ಯಶಸ್ವಿಗೆ ಸರ್ಕಾರದೊಂದಿಗೆ ಕೈಜೋಡಿಸಿವೆ.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಬೇಕು ಹಾಗೆಯೇ ಎಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.