(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಜು.೨೨:ಹಾಲಿನದರ ಏರಿಕೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು, ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆಯನ್ನು ಹೆಚ್ಚಿಸಿ ಶ್ರಮ ಜೀವಿಗಳ ಕೀಸೆಗೆ ಕನ್ನ ಕೊರೆದಿದೆ ಎಂದು ಟೀಕಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಬಾಯಿ ಬಡಿದುಕೊಂಡು ದೊಡ್ಡ
ಬಾನಾಗಡಿಯನ್ನೇ ಎಬ್ಬಿಸಿ ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್‌ನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲ್‌ನಿಂದಲೇ ವಸೂಲಿಗಿಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಟ್ವೀಟ್ ಮಾಡಿದ್ದಾರೆ.
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಕಾಂಗ್ರೆಸ್ ಸರ್ಕಾರ ಗೃಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಯನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ ವಿಧಾನ ಮಂಡಲ ಅಧಿವೇಶನ ಮುಗಿಯುತ್ತಿದ್ದಂತೆಯೇ ಜನತೆಗೆ ಬೆಲೆ ಏರಿಕೆ ಗ್ಯಾರಂಟಿ, ಬೆಲೆ ಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ಟೀಕಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ. ಹಸುಗಳ ಹಿಂಡಿ, ಬೂಸಾ ಬೆಲೆ ಏರಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು ಹಾಲಾದರೇನು ಖಜಾನೆ ತುಂಬಬೇಕಷ್ಟೆ. ಜನರೇ ಬದುಕೇ ಹಾಲಾಹಲವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.