ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಗೆ ಒತ್ತಾಯ

ಕಲಬುರಗಿ,ಆ.17-ಹಾಸ್ಟೆಲ್‍ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸಲು ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕಡಿತ ಮಾಡಿರುವ ಸರ್ಕಾರದ ಆದೇಶ ವಾಪಸ್ ಪಡೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿ.ಪಂ.ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಕಳೆದ ಐದಾರು ತಿಂಗಳಿಂದ ವೇತನ ನೀಡಿಲ್ಲ, ಚಿಂಚೋಳಿ ತಾಲ್ಲೂಕಿನ ಪಾಲತ್ಯಾ ತಾಂಡಾ ಮತ್ತು ಒಂಟಿ ತಾಂಡಾ ಆಶ್ರಮ ಶಾಲೆಗಳಲ್ಲಿನ ಹೊರಗುತ್ತಿಗೆ ನೌಕರರಿಗೆ 9-11 ತಿಂಗಳಿಂದ ವೇತನ ಪಾವತಿಸಿಲ್ಲ. ಅಲ್ಲದೆ ಹಲವಾರು ವಸತಿ ನಿಲಯಗಳ ಹೊರ ಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿಸದೆ ಅಲೆದಾಡಿಸಲಾಗುತ್ತಿದೆ. ಇದರಿಂದ ನೌಕರರು ಸಾಲದ ಸುಳಿಯಲ್ಲಿ ಸಿಕ್ಕು ಒದ್ದಾಡುವಂತಾಗಿದೆ. ಆದ್ದರಿಂದ ಕೂಡಲೇ ಬಾಕಿ ವೇತನ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಹಾಸ್ಟೆಲ್‍ಗಳಲ್ಲಿ ದುಡಿಯುತ್ತಿರುವ ಎಲ್ಲ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕೊಡಬೇಕು ಅಲ್ಲದೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಹೊರಗುತ್ತಿಗೆ ಎಂಬ ಜೀತ ಪದ್ಧತಿ ಕೈ ಬಿಡಬೇಕು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕಡಿತಗೊಳಿಸಿದ ಆದೇಶ ವಾಪಸ್ ಪಡೆಯಬೇಕು, ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು, ವಾರಕ್ಕೊಂದು ರಜೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾಧ್ಯಕ್ಷ ಪರಶುರಾಮ ಹಡಗಲಿ, ಕಾರ್ಯದರ್ಶಿ ಶರಣಸಿದ್ದಪ್ಪ ದೇಸಾಯಿ, ಉಪಾಧ್ಯಕ್ಷ ಮೇಘರಾಜ ಕಠಾರೆ, ಮಲ್ಲಮ್ಮ ಕೋಡ್ಲಿ, ನರಸಮ್ಮ ಕೊಂಡಂಪಳ್ಳಿ, ಬಾಬು ಹೊಸಮನಿ, ನಾಗರಾಜ ಕಟ್ಟಿಮನಿ, ನರಸಮ್ಮ ಚಂದನಕೇರಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.