ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹಿಸಿ ಆ.1ರಂದು ಪ್ರತಿಭಟನೆ

ಧಾರವಾಡ,ಜು28: ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ (ಓಬಿಸಿ) ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ ಅಂಬಡಗಟ್ಟಿ ಆಗ್ರಹಿಸಿದರು.
ಈ ಕುರಿತು ರಾಜ್ಯ ಘಟಕ ಹಾಗೂ ರಾಷ್ಟ್ರೀಯ ಘಟಕದ ವತಿಯಿಂದ ಅಗಸ್ಟ್ 1 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಅದರಂತೆ ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯದ ಜನರು ಬಹುತೇಕ ಕೃಷಿ ಮತ್ತು ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದು ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಈ ಹಿಂದಿನ ಸರ್ಕಾರಗಳು ವೀರಶೈವ ಲಿಂಗಾಯತ ಸಮುದಾಯವನ್ನು ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿಲ್ಲ. ರಾಜಕೀಯ ಶಕ್ತಿಗಳಿಗೆ ನಾವು ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಿ ಧಾರವಾಡ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯವನ್ನು ಬಹುದಿನದಿಂದ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯವಾಗಿದೆ ಎಂದು ತಿಳಿಸಿದರು.
ರಾಜ್ಯ ಉಪಾಧ್ಯಕ್ಷ ರುದ್ರಣ್ಣ ಹೊರಕೇರಿ, ಎಮ್ ಎಫ್ ಹಿರೇಮಠ, ರಾಜೇಂದ್ರ ಕಪಲಿ, ಗೂಳಪ್ಪ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟಿ, ಕಲ್ಲಪ್ಪ ಶೆಟ್ಟರ, ಅನೀಲ ಅಂಗಡಿ ಸೇರಿದಂತೆ ಹಲವರು ಇದ್ದರು.