ಸತೀಶ್ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು,ನ.೯- ಹಿಂದೂ ಅಶ್ಲೀಲ ಪದ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮೊನ್ನೆ ಹಿಂದೂ ಎಂಬ ಪದಕ್ಕೆ ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲ ಅರ್ಥವಿದೆ ಎಂದು ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಹೇಳಿಕೆಯನ್ನು ಬಿಜೆಪಿ ಚುನಾವಣಾ ಅಸ್ತ್ರವಾಗಿ ಬಳಸಲು ಸತೀಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನಾ ಧರಣಿ ನಡೆಸಲಾಗಿದೆ. ಹಾಗೆಯೇ ಸಾಮಾಜಿಕ ಜಾಲ ತಾಣದಲ್ಲೂ ಹಿಂದೂ ವಿರೋಧಿ ಕಾಂಗ್ರೆಸ್ ಎಂಬ ಆಶ್‌ಟ್ಯಾಗ್ ಬಳಸಿ ಅಭಿಯಾನವನ್ನು ಆರಂಭಿಸಲಾಗಿದೆ. ಜತೆಗೆ ಸತೀಶ್ ಜಾರಕಿಹೊಳಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲೂ ಬಿಜೆಪಿ ಮುಂದಾಗಿದೆ.ಹಿಂದೂ ಅಶ್ಲೀಲ ಪದ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸಬೇಕು ಎಂಬ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲು ಅವರ ಸೂಚನೆ ಮೇರೆಗೆ ಬಿಜೆಪಿಯ ಎಲ್ಲ ಜಿಲ್ಲಾ ತಾಲ್ಲೂಕು ಘಟಕಗಳು ಮುಖಂಡರುಗಳು ತಮ್ಮ ತಮ್ಮ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಈ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು ಭಾಗಿಯಾಗಿ ಸತೀಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.ಹಾಗೆಯೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲೂ ಪ್ರತಿಭಟನೆ
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಘೊಷಣೆಗಳನ್ನು ಬಿಜೆಪಿ ಕಾರ್ಯಕರ್ತರು ಹಾಕಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಸಾಮಾಜಿಕ ಜಾಲತಾಣದಲ್ಲೂ ಅಭಿಯಾನ
ಸತೀಶ್ ಜಾರಕಿಹೊಳಿ ಅವರ ಹೇಳಿಕೆ ವಿರುದ್ಧ ಬಿಜೆಪಿ ಸಾಮಾಜಿಕ ಜಾಲತಾಣದಲ್ಲೂ ಅಭಿಯಾನ ನಡೆಸಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಎಂಬ ಆಶ್‌ಟ್ಯಾಗ್ ಬಳಸಿ ಅಭಿಯಾನ ನಡೆಸಿದೆ.