ಹಿಂದೂ ಕುರಿತು ಅವಹೇಳನ: ಸತೀಶ್ ಜಾರಕಿಹೊಳಿ ವಿರುದ್ಧ ಮೊಕದ್ದಮೆ ದಾಖಲಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕಲಬುರಗಿ,ನ.9:ಹಿಂದೂ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್ ಅವರು ಮಾತನಾಡಿ, ಹಿಂದೂ ಅಶ್ಲೀಲ ಹಾಗೂ ಅಸಹ್ಯ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ಜಾರಕಿಹೊಳಿ ಅವರು ಹೇಳಿಕೆ ನೀಡಿದ್ದು ಇಡೀ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಅವರು ಕೂಡಲೇ ದೇಶದ ಜನತೆ ಕ್ಷಮೆ ಕೇಳಬೇಕು. ಇಲ್ಲದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಅವರಿಗೆ ಜನರೇ ತಕ್ಕ ಪಾಠ ಕಲಿಸುವರು ಎಂದು ಎಚ್ಚರಿಸಿದರು.
ಬಿಜೆಪಿ ಗ್ರಾಮಾಂತರ ಜಿಲಾ ಘಟಕದ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರು ಮಾತನಾಡಿ, ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಅವರ ಕಾಂಗ್ರೆಸ್ ಮುಖಂಡರೇ ಖಂಡಿಸಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಾಂಗ್ರೆಸ್ ಪಕ್ಷವು ಹಿಂದೂಗಳ ವಿರುದ್ಧ ಇರುವ ಮನೋಸ್ಥಿತಿಯನ್ನು ತೋರಿಸಿದಂತಾಗುತ್ತದೆ ಎಂದರು.
ಸತೀಶ್ ಜಾರಕಿಹೊಳಿ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ವಾಲ್ಮೀಕಿ ರಾಮಾಯಣ ಪ್ರತಿಯೊಬ್ಬ ಹಿಂದೂಗಳಿಗೂ ಪವಿತ್ರವಾಗಿದೆ. ಅಂತಹ ಸಮುದಾಯದಿಂದ ಬಂದ ಸತೀಶ್ ಜಾರಕಿಹೊಳಿ ಅವರು ಇಂತಹ ಅವಹೇಳನ ಹೇಳಿಕೆ ನೀಡಿದ್ದು ಸರಿಯಲ್ಲ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಇಲ್ಲದೇ ಇದ್ದರೆ ಸತೀಶ್ ಜಾರಕಿಹೊಳಿ ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಬಿಜೆಪಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಅವರು ಮಾತನಾಡಿ, ಮುಸ್ಲಿಂ ಮತದಾರರನ್ನು ಓಲೈಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಕುರಿತು ಅವಹೇಳನ ಮಾಡಿದ್ದಾರೆ. ಅವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಪ್ರತಿಭಟನೆಕಾರರು ನಂತರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿ, ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒತ್ತಾಯಿಸಿದ್ದಾರೆ.
ಪಕ್ಷದ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಡಾ. ಉಮೇಶ್ ಜಾಧವ್, ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ್, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್, ರಾಜ್ಯ ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಮಾಜಿ ಶಾಸಕ ಅಮರನಾಥ್ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಅವಿನಾಶ್ ಕುಲಕರ್ಣಿ, ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್, ರಾಜು ನಾಗನಳ್ಳಿ, ರಾಘವೇಂದ್ರ ಕುಲಕರ್ಣಿ, ನಾಮದೇವ್ ರಾಠೋಡ್ ಮುಂತಾದವರು ಪಾಲ್ಗೊಂಡಿದ್ದರು.