ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಗೆ ಕಾಂಗ್ರೆಸ್ ಒತ್ತಾಯ

ಕಲಬುರಗಿ.ಏ.08:ಕರ್ನಾಟಕ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ನಿಯಂತ್ರಣಕ್ಕಾಗಿ ಲಾಕ್‍ಡೌನ್ ಮರು ಜಾರಿಗೊಳಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಒತ್ತಾಯಿಸಿದರು.
ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಸರ್ವ ಪಕ್ಷಗಳ ಸಭೆಯನ್ನು ಕರೆಯುವುದಾಗಿ ಹೇಳಿದ್ದು, ಕೂಡಲೇ ಸರ್ವ ಪಕ್ಷಗಳ ಸಭೆಯನ್ನು ಕರೆದು ಲಾಕ್‍ಡೌನ್ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಒಂದೇ ದಿನದಲ್ಲಿ 1,20,000 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. ಜಿಲ್ಲೆಯಲ್ಲಿಯೂ ಸಹ ಹತ್ತು ಸಾವಿರಕ್ಕೆ ಸೋಂಕಿತರು ಹೆಚ್ಚಿರುವ ಸಾಧ್ಯತೆ ಇದೆ. ಕೋವಿಡ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಕೂಡಲೇ ಲಾಕ್‍ಡೌನ್ ಜಾರಿಗೊಳಿಸುವ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಬಾರಿ ಲಾಕ್‍ಡೌನ್ ಜಾರಿಗೆ ತರುವ ಮುನ್ನ ದುಡಿಯುವ ವರ್ಗಕ್ಕೆ ಹಾಗೂ ಬಡವರಿಗೆ ಮಾಸಿಕ ಹತ್ತು ಸಾವಿರ ರೂ.ಗಳನ್ನು ಅವರ ಖಾತೆಗೆ ಹಾಕಬೇಕು. ಅಲ್ಲದೇ ಅವರಿಗೆ ಆಹಾರಧಾನ್ಯ ಮುಂತಾದ ಬೇಡಿಕೆಗಳನ್ನು ಸರ್ವ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಮಂಡಿಸಲಿದೆ ಎಂದು ಅವರು ಹೇಳಿದರು.
ಲಾಕ್‍ಡೌನ್ ನಿಯಮಗಳ ಜಾರಿಯಲ್ಲಿಯೂ ಸಹ ತಾರತಮ್ಯ ನೀತಿಯನ್ನು ರಾಜ್ಯ ಸರ್ಕಾರವು ಅನುಸರಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಸ್ಮಿ ಚುನಾವಣಾ ಬಹಿರಂಗ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಪಕ್ಷದ ಪ್ರಚಾರದ ಸಭೆಗೆ 500ಕ್ಕಿಂತ ಹೆಚ್ಚು ಜನ ಸೇರಿದರೆ ಕಾನೂನು ಕ್ರಮ ಕೈಗೊಳ್ಳುತ್ತಾರೆ. ಇಂತಹ ದ್ವಂದ್ವ ನೀತಿಯನ್ನು ಸರ್ಕಾರ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಯ ಜನ ವಿರೋಧಿ ನೀತಿಗಳಿಂದ ಬೇಸತ್ತು ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವರು ಎಂದು ಸಲೀಂ ಅಹ್ಮದ್ ಅವರು ಹೇಳಿದರು.
ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಲೆಂದೇ ಒಳ ಒಪ್ಪಂದ ಮಾಡಿಕೊಂಡು ಜಾತ್ಯಾತೀತ ಜನತಾದಳವು ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಹಾಕಿದೆ. ಆದಾಗ್ಯೂ, ಮಾಜಿ ಶಾಸಕ ದಿ. ಬಿ. ನಾರಾಯಣರಾವ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಶಕ್ತಿ ಮೀರಿದ ಪ್ರಯತ್ನ ಮಾಡಿದ್ದು, ಅವರ ಪತ್ನಿ ಶ್ರೀಮತಿ ಮಾಲಾ ಬಿ. ನಾರಾಯಣರಾವ್ ಅವರ ಗೆಲುವು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಸುಳ್ಳು ಭರವಸೆಗಳನ್ನು ಕೊಡುತ್ತಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳನ್ನು ಕೊಡುತ್ತೇವೆ ಎಂದು ಘೋಷಿಸಿದ್ದರು. ಹಾಗೆ ನೋಡಿದರೆ ಕನಿಷ್ಠ 16 ಕೋಟಿ ಉದ್ಯೋಗಗಳು ಸೃಷ್ಟಿಯಾಗಬೇಕಿತ್ತು. 16 ಲಕ್ಷ ಉದ್ಯೋಗಗಳನ್ನೂ ಸಹ ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂದು ಅವರು ದೂರಿದರು.
ಇನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹಸ್ತಕ್ಷೇಪದ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಸ್ವತ: ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಬೇಕು. ಅದೂ ಆಗದೇ ಇದ್ದರೆ ರಾಜ್ಯಪಾಲರು ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಶಿಫಾರಸ್ಸು ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಮೇ ತಿಂಗಳಲ್ಲಿ ಪತನಗೊಳ್ಳುತ್ತದೆ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಹಿರಂಗವಾಗಿ ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳ ಪುತ್ರ ವಿಜಯೇಂದ್ರ ಅವರ ಹಗರಣದ ಕುರಿತು ಹೇಳಿದ್ದಾರೆ. ಈ ಕುರಿತು ಸೂಕ್ತ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ವಿಧಾನಸಭೆಯಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ಶ್ರೀಮತಿ ಖನೀಜ್ ಫಾತಿಮಾ ಬೇಗಂ, ಪ್ರಿಯಾಂಕ್ ಖರ್ಗೆ, ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಲತಾ ರವಿ ರಾಠೋಡ್ ಮುಂತಾದವರು ಉಪಸ್ಥಿತರಿದ್ದರು.