ಹೆಚ್.ಐ.ವಿ. ಕುರಿತು ಜನಸಾಮನ್ಯರಲ್ಲಿ ಅರಿವು ಮೂಡಿಸಿ

ಮಂಗಳೂರು, ಮಾ.೨೬- ಸಾರ್ವಜನಿಕರಲ್ಲಿ ಹೆಚ್.ಐ.ವಿ./ಏಡ್ಸ್ ಕುರಿತು ಅರಿವು ಹಾಗೂ ಜಾಗೃತಿ ಮೂಡಿಸುವಂತಹಾ ಕೆಲಸ ಆಗಬೇಕು ಆಗಮಾತ್ರ ಏಡ್ಸ್ ಸೋಂಕಿನಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಹೇಳಿದರು.
ಅವರು ನಗರದ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಹೆಚ್.ಐ.ವಿ./ಏಡ್ಸ್ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಚ್.ಐ.ವಿ ಎನ್ನುವುದು ವೈರಸ್ ಮೂಲಕ ಹರಡುವ ರೋಗವಾಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹಂತ ಹಂತವಾಗಿ ನಾಶಗೊಳಿಸುವುದರಿಂದ ವಿವಿಧ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ರೋಗ ಹರಡದಂತೆ ಮುಂಜಾಗೃತಾ ಕ್ರಮವಾಗಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು ಇದರಿಂದ ರೋಗದ ಸ್ಥಿತಿಗತಿ ತಿಳಿಯಲು ಸಾಧ್ಯವಾಗುತ್ತದೆ ಎಂದರು.
ಹೆಚ್.ಐ.ವಿ. /ಏಡ್ಸ್ ಸೋಂಕಿತರಿಗೆ ಇರುವ ವಿವಿಧ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿ ಪ್ರಯೋಜನ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು ಎಂದ ಅವರ ಜನರು ಹೆಚ್.ಐ.ವಿ/ಏಡ್ಸ್ ಹರಡುವ ಮಾರ್ಗಗಳನ್ನು ಸರಿಯಾಗಿ ತಿಳಿದುಕೊಂಡರೆ ಈ ರೋಗ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಖಾಸಗಿ ಲ್ಯಾಬ್‌ಗಳು ಹೆಚ್.ಐ.ವಿ ಪರೀಕ್ಷೆಯ ವರದಿಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದೆ ಎಂದ ಅವರು ಸಂಬಂಧಪಟ್ಟ ಅಧಿಕಾರಿಗಳು ಖಾಸಗಿ ಲ್ಯಾಬ್ ಗಳಿಂದ ಹೆಚ್.ಐ.ವಿ. ಪರೀಕ್ಷೆ ನಡೆದ ಬಗ್ಗೆ ಮಾಹಿತಿ ಪಡೆಯುವುದರೊಂದಿಗೆ ಎಷ್ಟು ಸೋಂಕಿತರು ಸರ್ಕಾರದಿಂದ ಯಾವೆಲ್ಲ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದರು.
ಸಭೆಯಲ್ಲಿ ಹೆಚ್.ಐ.ವಿ ಸೋಂಕಿತರಿಗೆ ಸರ್ಕಾರದ ವತಿಯಿಂದ ದೊರಯುವ ಸೌಲಭ್ಯಗಳ ಕುರಿತು ಮಾತನಾಡಿದ ಅವರು ನಿವೇಶನ, ಉಚಿತ ಮನೆ, ಸಾಲ ಸೌಲಭ್ಯ, ಚಿಕಿತ್ಸೆ ಹಾಗೂ ಇತರ ಸೌಲಭ್ಯಗಳ ಬಗ್ಗೆಯೂ ಫಲಾನುಭವಿಗಳಿಗೆ ಮಾಹಿತಿ ನೀಡಬೇಕು ಎಂದ ಅವರು ಸೋಂಕಿತ ವಲಸೆ ಕಾರ್ಮಿಕರ ಬಗ್ಗೆ ಸರಿಯಾದ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯಾರಿ ಮಾತನಾಡಿ ಏಡ್ಸ್ ಸೋಂಕಿತರಿಗೆ ಮಾನಸಿಕ, ಆರ್ಥಿಕ ಬೆಂಬಲ ನೀಡುವುದು ಅವಶ್ಯಕವಾಗಿರುತ್ತದೆ. ಇದರಿಂದ ಅವರಿಗೂ ಸಮಾಜದಲ್ಲಿ ಎಲ್ಲರಂತೆ ಸಮಾನತೆ ದೊರಕುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ವಿಶ್ವದ ಅನೇಕ ದೇಶಗಳಲ್ಲಿ ಯುವ ಜನರಲ್ಲಿ ಹೆಚ್.ಐ.ವಿ ಸೋಂಕು ಪ್ರಮಾಣ ಹೆಚ್ಚುತ್ತಿದೆ ಆದರೆ ನಮ್ಮ ದೇಶದಲ್ಲಿ ಸೋಂಕಿತರ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ ಎಂದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.