ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲಿ ಸಬಲೆಯಾಗಿ, ಮುಂಚೂಣಿಯಲ್ಲಿದ್ದಾಳೆ : ಕುಮಠಳ್ಳಿ

ಅಥಣಿ :ಮಾ.11: ಇಂದಿನ ಮಹಿಳೆಯರು ಕುಟುಂಬ ನಿರ್ವಹಣೆಯ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಕೂಡ ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು.
ಅವರು ತಾಲೂಕಾ ಪಂಚಾಯತ ಸಭಾಂಗಣದಲ್ಲಿ ತಾಲೂಕಾ ಆಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಸಂಸ್ಕøತಿಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವಿದೆ. ನಮ್ಮ ಹೆಣ್ಣು ಮಕ್ಕಳು ಎಂದಿಗೂ ಅಬಲೆಯಲ್ಲ, ಪ್ರತಿಯೊಂದು ಕ್ಷೇತ್ರದಲ್ಲಿ ಸಬಲೆಯಾಗಿ, ಮುಂಚೂಣಿಯಲ್ಲಿದ್ದಾಳೆ ಪ್ರತಿಯೊಬ್ಬ ಮಹಿಳೆಯರು ಮತ್ತು ಸ್ತ್ರೀಶಕ್ತಿ ಸಂಘಗಳ ಸದಸ್ಯ ಮಹಿಳೆಯರು ಸರ್ಕಾರದ ಪ್ರತಿಯೊಂದು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ ಎಂಎಸ್ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ, ರೇಷ್ಮಾ ಇನಾಮದಾರ ಮಾತನಾಡಿ ಪ್ರತಿಯೊಂದು ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಮಹತ್ತರವಾದದ್ದು, ಮಹಿಳೆ ಅನೇಕ ಸಮಸ್ಯೆ ಮತ್ತು ನೋವುಗಳನ್ನು ಅನುಭವಿಸಿದರೂ ಅವುಗಳನ್ನೆಲ್ಲ ಮರೆತು ಪ್ರತಿದಿನ ಹಸನ್ಮುಖಿಯಾಗಿ ಕುಟುಂಬವನ್ನು ನಿರ್ವಹಣೆ ಮಾಡುತ್ತಾಳೆ. ಇಡೀ ಕುಟುಂಬವನ್ನು ನಿರ್ವಹಣೆ ಮಾಡಬೇಕಾದ ಮಹಿಳೆ ಮೊದಲು ತಾನು ಸದೃಢವಾಗಿರಬೇಕು. ಅದಕ್ಕಾಗಿ ಪ್ರತಿಯೊಬ್ಬ ಮಹಿಳೆಯರು ತಮ್ಮ ಆರೋಗ್ಯ ರಕ್ಷಣೆಯತ್ತ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಅತಿಥಿಗಳಾಗಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅಶೋಕ ಕಾಂಬಳೆ, ಶಿಕ್ಷಕಿ ಭಾರತಿ ಕೋರಿ ಮಾತನಾಡಿದರು. ಈ ವೇಳೆ ಮುರಿಗೆವ್ವ ಗಡಾ ಲೋಟ, ರೇಣುಕಾ ಹೊಸಮನಿ ಸೇರಿದಂತೆ ಇನ್ನೇತರರು ಉಪಸ್ಥಿತರಿದ್ದರು. ಉದಯಗೌಡ ಪಾಟೀಲ ಸ್ವಾಗತಿಸಿದರು. ಆರ್ ಎಸ್ ಗೂಳಪ್ಪನವರ ಕಾರ್ಯಕ್ರಮ ನಿರೂಪಿಸಿದರು. ವಂದಿಸಿದರು.