ಹೆಣ್ಣು ಮಕ್ಕಳ ಮೇಲಾಗುವ ದೌರ್ಜನ್ಯ ತಡೆದು ವಿಶೇಷಸ್ಥಾನಮಾನ ಕಲ್ಪಿಸಬೇಕು

ಸಂಜೆವಾಣಿ ವಾರ್ತೆ
   ದಾವಣಗೆರೆ, ಜ.೨೫: ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆದು, ಅವರಿಗೆ ಸಮಾಜದಲ್ಲಿ ವಿಶೇಷವಾದ ಸ್ಥಾನಮಾನ ಸಿಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ತಿಳಿಸಿದರು.ಅವರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಹಯೋಗದಲ್ಲ್ಲಿ ಜಿಲ್ಲಾಡಳಿತ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “ಬೇಟಿ ಬಚಾವೋ-ಬೇಟಿ ಪಡಾವೋ” ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಅಭಿಯಾನದಡಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಈಗಿನ ದಿನಮಾನದಲ್ಲಿ ಎಲ್ಲ ಸವಾಲುಗಳನ್ನು ಸ್ವೀಕರಿಸಿ, ಹೆಣ್ಣು ಎಲ್ಲಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ತನ್ನದೇ ಆದ ನೆಲೆ ಕಂಡುಕೊಂಡು ಧೈರ್ಯದಿಂದ ಮುನ್ನಡೆಯುತ್ತಿದ್ದಾಳೆ. ಇಂತಹ ಹೆಣ್ಣು ಮಕ್ಕಳನ್ನು ರಕ್ಷಿಸುವ ಮತ್ತು ಪ್ರೋತ್ಸಾಹಿಸುವ ಗುಣವನ್ನು ನಾವೆಲ್ಲರೂ ಬೆಳಿಸಿಕೊಳ್ಳಬೇಕು ಎಂದರು. ಬೇಟಿ ಬಚಾವೋ ಬೇಟಿ ಪಡವೋ ಎಂಬುದು 2015 ರಲ್ಲಿ  ಕೇಂದ್ರ  ಸರ್ಕಾರದ ಯೋಜನೆಯಾಗಿದ್ದು, ಈ ಯೋಜನೆಯನ್ನು ಜ.24 ರಂದು ಚಾಲನೆ ನೀಡಿದರು.ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಬಹಳಷ್ಟು ರೀತಿಯ ದೌರ್ಜನ್ಯಗಳು ನಡೆಯುತ್ತಿವೆ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಪ್ಪಿತಸ್ಥರಿಗೆ ಕಾನೂನಿನ ರೀತಿಯಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸಿದರೆ ಮಾತ್ರ ಮುಂದೆ ಇಂತಹ ಪ್ರಕರಣಗಳು ಮರುಕಳಿಸುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಭ್ರೂಣಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ.  ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕಾಗಿದೆ ಎಂದರು.