ಹೈದರಾಬಾದ್ ಚುನಾವಣೆ ನಟ ಪವನ್ ಬಿಜೆಪಿಗೆ ಬೆಂಬಲ

ಹೈದರಾಬಾದ್, ನ.೨೧- ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಸ್ಪರ್ಧಿಸದಿರಲು ಜನಸೇನಾ ಪಕ್ಷ ನಿರ್ಧರಿಸಿದ್ದು, ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಜನಸೇನಾ ಘೋಷಿಸಿದೆ.
ಜನಸೇನಾ ಪಕ್ಷದ ಸಂಸ್ಥಾಪಕ, ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.
ಈ ಕುರಿತು ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಸಭೆ ನಡೆಸಿದ್ದು, ತಮ್ಮ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಘೋಷಿಸಿದ್ದಾರೆ. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲಾಗುವುದು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬಲಪಡಿಸಲು ನಾವು ಚುನಾವಣೆಯಿಂದ ಹೊರಗುಳಿಯಲು ನಿರ್ಧರಿಸಿದ್ದೇವೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಪವನ್ ಕಲ್ಯಾಣ್ ತಿಳಿಸಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷಣ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.