ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಅ.30- ಮುಂಬರುವ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನಿರೀಕ್ಷೆ ಹೊಂದಲಾಗಿರುವ ಲಭ್ಯವಾಗಬಹುದಾದ ಲಸಿಕೆಯನ್ನು ಪ್ರಥಮ ಹಂತದಲ್ಲಿ ನೀಡಲು ಸಿದ್ದಪಡಿಸಬೇಕಿರುವ ಆದ್ಯತಾ ಪಟ್ಟಿಗೆ ಪೂರ್ವ ಸಿದ್ದತೆಯೊಂದಿಗೆ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಲಸಿಕೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಕೋವಿಡ್-19 ಲಸಿಕೆ ಲಭ್ಯವಾದಲ್ಲಿ ಅದನ್ನು ಕೋವಿಡ್-19 ನಿರ್ವಹಣೆಯಲ್ಲಿ ನಿರತರಾಗಿರುವ ಆರೋಗ್ಯ ಸೇವೆಯ ಕಾರ್ಯಕರ್ತರಿಗೆ ಆದ್ಯತೆ ಮೇರೆಗೆ ನೀಡಬೇಕಾಗುತ್ತದೆ ಎಂದು ಈಗಾಗಲೇ ಸೂಚನೆ ಬಂದಿದೆ. ಇದಕ್ಕಾಗಿ ಆರೋಗ್ಯ ಸೇವೆಯಲ್ಲಿ ತೊಡಗಿರುವವರ ನಿಖರ ಮಾಹಿತಿಯನ್ನೊಳಗೊಂಡ ಆದ್ಯತಾ ಪಟ್ಟಿಯನ್ನು ಸಲ್ಲಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಪ್ರಥಮ ಹಂತದಲ್ಲಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಎಲ್ಲಾ ಹಂತದ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಆಯುಷ್ ಆಸ್ಪತ್ರೆ ಮತ್ತು ಡಿಸ್‍ಪೆನ್ಸ್‍ಸರಿಸ್‍ಗಳು, ಕಾರ್ಪೋರೇಟ್ ಆಸ್ಪತ್ರೆಗಳು, ಖಾಸಗಿ ವೈದ್ಯಕೀಯ ಕಾಲೇಜು, ನರ್ಸಿಂಗ್ ಹೋಂ, ಕ್ಲೀನಿಕ್‍ಗಳಲ್ಲಿ ಇರುವ ಎಲ್ಲಾ ಆರೋಗ್ಯ ಸಂಬಂಧಿ ಸೇವಾ ಕಾರ್ಯಕರ್ತೆಯರನ್ನು ಒಳಗೊಂಡ ಆದ್ಯತಾ ಪಟ್ಟಿ ತಯಾರಿಸಬೇಕು ಎಂದರು.
ಲಸಿಕೆ ನಿಡಬೇಕಿರುವ ಆದ್ಯತಾ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಾದ ಎ.ಎನ್.ಎಂ, ಎಂಪಿಡಬ್ಲೂ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ನರ್ಸ್‍ಗಳು, ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯಕೀಯ ಕಾಲೇಜಿನ ಬೋಧಕರು, ಬೋಧಕೇತರ ಸಿಬ್ಬಂದಿ, ಪ್ಯಾರಾಮೆಡಿಕಲ್ ಸಿಬ್ಬಂದಿ, ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ತಂತ್ರಜ್ಞರು, ವಿಜ್ಞಾನಿಗಳು, ಡಾಟಾಎಂಟ್ರಿ ಆಪರೇಟರ್ ಗಳು ಸೇರಿದಂತೆ ವೈದ್ಯಕೀಯ ವಲಯಕ್ಕೆ ಸಂಬಂಧಿಸಿದ ವಿವಿಧ ಹಂತದ ಸಿಬ್ಬಂದಿ ಸೇರ್ಪಡೆಯಾಗಬೇಕಿದೆ ಎಂದರು.
ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಮಾಡಬೇಕಿರುವ ಆದ್ಯತಾ ಪಟ್ಟಿ ಸಂಬಂಧಿಸಿದಂತೆ ಜಿಲ್ಲೆಯಿಂದ ಒದಗಿಸಬೇಕಿರುವ ಅಂಕಿ ಅಂಶಗಳು ಯಾವುದೇ ವ್ಯತ್ಯಾಸವಾಗಬಾರದು. ಈ ನಿಟ್ಟಿನಲ್ಲಿ ಸಮರ್ಪಕವಾಗಿ ಪೂರ್ವ ಸಿದ್ದತೆ ಯೊಂದಿಗೆ ಪಟ್ಟಿ ತಯಾರಿಸಿ ಕಳುಹಿಸಿ ಕೊಡುವ ಪ್ರಕ್ರಿಯೆ ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಿಖರ ಅಂಕಿ ಅಂಶಗಳನ್ನು ಒಳಗೊಂಡ ಯೋಜನೆ ತಯಾರಿಸಿ ವರದಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಆದ್ಯತಾ ಪಟ್ಟಿ ಸಿದ್ದಪಡಿಸುವ ಸಲುವಾಗಿಯೇ ಅಧಿಕಾರಿಗಳ ತಂಡ ರಚನೆ ಮಾಡಿ ಸೂಕ್ತ ತರಬೇತಿ ನೀಡಬೇಕಿದೆ. ಜಿಲ್ಲಾ, ತಾಲ್ಲೂಕು ಕೇಂದ್ರದಲ್ಲಿ ಅಧಿಕಾರಿಗಳೇ ಉತ್ತರದಾಯಿತ್ವವಾಗಿ ಕಾರ್ಯನಿರ್ವಹಿಸಬೇಕಿದೆ. ಲಸಿಕೆ ದಾಸ್ತಾನು ನಿರ್ವಹಣೆ ಸೇರಿದಂತೆ ಒಟ್ಟಾರೆ ಪ್ರಥಮ ಹಂತದಲ್ಲಿ ಲಸಿಕೆ ನೀಡುವ ಉದ್ದೇಶಕ್ಕಾಗಿಯೇ ಪೂರ್ವ ಯೋಜಿತವಾಗಿ ಎಲ್ಲಾ ಸಿದ್ದತೆಗಳನ್ನು ಒಳಗೊಂಡ ನೀಲಿ ನಕಾಶೆ ತಯಾರಿಸಿ ಸಿದ್ದಪಡಿಸಿಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆ ಜೊತೆ ಇತರೆ ಇಲಾಖೆಗಳು ಸೇರಿ ಸಮನ್ವಯದಿಂದ ಆದ್ಯತಾ ಪಟ್ಟಿ ತಯಾರಿಸಬೇಕು. ಸುಸೂತ್ರವಾಗಿ ಕೊರೊನಾ ವಾರಿಯರ್ಸ್‍ಗಳಿಗೆ ಲಭ್ಯವಾಗಬಹುದಾದ ಲಸಿಕೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ರೂಪುರೇಷೆಯೊಂದಿಗೆ ಸನ್ನದರಾಗಿರಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯರು ಅಧಿಕಾರಿಗಳನ್ನೊಳಗೊಂಡ ವಾಟ್ಸ್‍ಆಫ್ ಗ್ರೂಪ್ ತೆರದು ಲಸಿಕೆ ಕುರಿತು ಹೆಚ್ಚಿನ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಲಸಿಕೆ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿಯೇ ಕಂಟ್ರೋಲ್ ರೂಂ ತೆರೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಬೋಯರ್ ಹರ್ಷಲ್ ನಾರಾಯಣ ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವಿಶ್ವ ಆರೋಗ್ಯ ಸಂಸ್ಥೆಯ ಮೈಸೂರು ಸರ್ವಲೆನ್ಸ್ ಅಧಿಕಾರಿ ಡಾ. ಸುಧೀರ್ ನಾಯಕ್, ಜಿಲ್ಲಾ ಲಸಿಕಾಧಿಕಾರಿ ವಿಶ್ವೇಶ್ವರಯ್ಯ, ಸರ್ವಲೇನ್ಸ್ ಅಧಿಕಾರಿ ಡಾ. ನಾಗರಾಜು, ಡಾ. ಮಹೇಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಮುರಳೀಕೃಷ್ಣ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಕೆ. ಸುರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ. ಜವರೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆಲುವಯ್ಯ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.