೮ನೇ ಸುತ್ತಿನ ಮಾತುಕತೆ ರೈತರ ಮನವೊಲಿಕೆಗೆ ಕೇಂದ್ರದ ಕಸರತ್ತು

ನವದೆಹಲಿ,ಜ.೮-ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಹಾಗೂ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡಬೇಕು ಎಂದು ಒತ್ತಾಯಿಸಿ ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರೊಂದಿಗೆ ಕೇಂದ್ರ ಸರ್ಕಾರ ಇಂದು ೮ನೇ ಸುತ್ತಿನ ಮಾತುಕತೆ ನಡೆಸಲಿದೆ.
ರೈತರು ನಡೆಸುತ್ತಿರುವ ಪ್ರತಿಭಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಳೆದ ೪೪ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇಂದು ವಿಜ್ಞಾನ ಭವನದಲ್ಲಿ ರೈತರ ಜತೆ ಮಾತುಕತೆ ನಡೆಸಿ ಸಮಸ್ಯೆಗೆ ಹರಿಹಾರ ಕಂಡುಕೊಳ್ಳುವ ನಿರೀಕ್ಷೆ ಇದೆ.
ಒಂದು ವೇಳೆ ಮಾತುಕತೆ ವಿಫಲವಾದರೆ ಗಣರಾಜ್ಯೋತ್ಸವ ದಿನದಂದು ಟ್ರಾಕ್ಟರ್ ಚಳವಳಿ ನಡೆಸುವುದಾಗಿ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಇದಕ್ಕೆ ಪೂರ್ವಭಾವಿಯಾಗಿ ನಿನ್ನೆ ದೆಹಲಿಯಲ್ಲಿ ರೈತ ಸಂಘಟನೆಗಳು ಟ್ರಾಕ್ಟರ್ ಪ್ರತಿಭಟನೆ ತಾಲೀಮು ನಡೆಸಿತ್ತು.
ಇದುವರೆಗೂ ಕೇಂದ್ರದೊಂದಿಗೆ ರೈತ ಸಂಘಟನೆಗಳ ಮುಖಂಡರು ೭ ಸುತ್ತು ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪಟ್ಟು ಹಿಡಿದಿದ್ದರೆ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಿಲ್ಲ ಎಂದು ತನ್ನ ನಿಲುವಿಗೆ ಅಂಟಿಕೊಂಡಿದೆ. ಇದರಿಂದಾಗಿ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಲು ಹಾಗೂ ಈ ಕಾಯ್ದೆಗಳ ಪರಾಮರ್ಶೆ ನಡೆಸಲು ಎರಡೂ ಕಡೆ ಸಮಿತಿ ರಚನೆ ಮಾಡುವುದಾಗಿ ಕೇಂದ್ರ ಸರ್ಕಾರ ಮುಂದಿಟ್ಟಿರುವ ಪ್ರಸ್ತಾಪವನ್ನು ರೈತ ಸಂಘಟನೆಗಳು ತಿರಸ್ಕರಿಸಿವೆ.