1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಒಂದೆರಡು ದಿನದಲ್ಲಿ ತೀರ್ಮಾನ

ಬೆಂಗಳೂರು, ಏ. ೫- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ೧ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೆ – ಬೇಡವೆ? ಪರೀಕ್ಷೆ ಇಲ್ಲದೆ, ಈ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವ ಸಂಬಂಧ ಇನ್ನೆರೆಡು ದಿನಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಪ್ರಕಟಿಸಲಿದೆ.
೧ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೆ – ಬೇಡವೆ ಎಂಬ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು, ಶಿಕ್ಷಣ ತಜ್ಞರು, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಪೋಷಕರ ಸಂಘಟನೆಯ ಪ್ರತಿನಿಧಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ನಂತರ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಎಲ್ಲದರ ಬಗ್ಗೆಯೂ ಸುದೀರ್ಘವಾಗಿ ಚರ್ಚೆ ಮಾಡಲಾಗಿದೆ. ೧ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕೆ – ಬೇಡವೆ ಎಂಬ ಬಗ್ಗೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮತ್ತೆ ಸಭೆ ನಡೆಸಿ, ಇನ್ನೆರಡು ದಿನಗಳಲ್ಲಿ ತೀರ್ಮಾನ ಪ್ರಕಟಿಸಲಾಗುವುದು ಎಂದರು.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ೬ ರಿಂದ ೯ನೇ ತರಗತಿಗಳನ್ನು ಏ. ೨೦ರವರೆಗೂ ಬಂದ್ ಮಾಡುವ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡ ನಂತರ, ರಾಜ್ಯಾದ್ಯಂತ ೧ ರಿಂದ ೯ನೇ ತರಗತಿಯವರೆಗೆ ಪರೀಕ್ಷೆಗಳು ನಡೆಯುತ್ತವೆಯೋ – ಇಲ್ಲವೋ, ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಾಗುತ್ತದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘದ ಪ್ರತಿನಿಧಿಗಳು ಸೇರಿದಂತೆ, ಎಲ್ಲರ ಜೊತೆಯೂ ಚರ್ಚಿಸಿ, ಅಭಿಪ್ರಾಯಗಳನ್ನು ಪಡೆದಿದ್ದೇವೆ ಎಂದರು.
ಈ ಸಭೆಯಲ್ಲಿ ಪಾಲ್ಗೊಂಡಿದ್ದ ಖಾಸಗಿ ಶಾಲಾ ಆಡಳಿತ iಂಡಳಿ ವಿದ್ಯಾ ಭಾರತಿ ಪ್ರತಿನಿಧಿಗಳು ಮೌಲ್ಯಾಂಕನದ ಮೇಲೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ತಜ್ಞರಾದ ನಿರಂಜನ್ ಆರಾಧ್ಯ ಸೇರಿದಂತೆ, ಹಲವರು ಕಡ್ಡಾಯ ಶಿಕ್ಷಣ ಕಾಯ್ದೆ ಆರ್ ಟಿಇ ಅಡಿಯಲ್ಲಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಇರುವ ಅವಕಾಶವನ್ನು ಪ್ರಸ್ತಾಪಿಸಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಮುಕ್ತವಾಗಿ ಕೇಳಿದ್ದೇನೆ. ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ಸುರೇಶ್ ಕುಮಾರ್ ಹೇಳಿದರು.
ಕೋವಿಡ್ ಕಾರಣದಿಂದ ಶಾಲೆಗಳನ್ನು ಬಂದ್ ಮಾಡಿದ್ದರೂ ಟುಟೋರಿಯಲ್ ಗಳು ನಡೆಯುತ್ತಿರುವ ಬಗ್ಗೆಯೂ ಸಭೆಯಲ್ಲಿ ಕೆಲವರು ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು.
ನಗರದ ಕೆ.ಆರ್. ವೃತ್ತದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಯುಕ್ತ ಅನ್ಬುಕುಮಾರ್, ರೂಪ್ಸಾ ಸಂಘಟನೆಯ ಲೋಕೇಶ್ ತಾಳಿಕಟ್ಟೆ, ಕ್ಯಾಮ್ಸ್, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಸೇರಿದಂತೆ, ವಿವಿಧ ಶಿಕ್ಷಕ, ಪೋಷಕ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.