
ಬೆಂಗಳೂರು, ಏ.೭- ರಾಜ್ಯದ ೧೩ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದರೇ, ಕೆಲವೆಡೆ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ ೩೦-೪೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ ಒಂದರಿಂದ ಎರಡು ದಿನಗಳಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಉತ್ತಮ ಮಳೆಯಾಗಿತ್ತು. ಮಳೆಯ ನಂತರ ಉಷ್ಣಾಂಶ ತುಸು ಕಡಿಮೆಯಾಗಿದ್ದು, ಪ್ರಸ್ತುತ ೩೦ ಡಿಗ್ರಿ ಸೆಂಟಿಗ್ರೇಡ್ ಆಸುಪಾಸಿನಲ್ಲಿದೆ. ಶುಕ್ರವಾರ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಗರಿಷ್ಠ ೩೪, ಕನಿಷ್ಠ ೨೨ ಡಿಗ್ರಿ ಸೆಂಟಿಗ್ರೇಡ್ ಉಷ್ಣಾಂಶ ಇರಲಿದೆ. ಮಂಗಳೂರು ನಗರಕ್ಕೆ ಮಳೆ ಸಾಧ್ಯತೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ನಿರಂತರ ಏರಿಕೆಯಾಗುತ್ತಿದೆ. ಕಲಬುರ್ಗಿಯಲ್ಲಿ ನಿನ್ನೆಯ ಗರಿಷ್ಠ ಉಷ್ಣಾಂಶ ೪೦.೪ ಡಿಗ್ರಿ ದಾಖಲಾಗಿದೆ. ಇಂದು ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮಂಗಳವಾರ ಸುರಿದ ಒಂದೇ ಮಳೆಯಿಂದ ಮಹದೇವಪುರ, ಬೆಳ್ಳಂದೂರು ಕೆರೆ ಕೋಡಿ ಸೇರಿ ಹಲವೆಡೆ ರಸ್ತೆಗಳ ಮೇಲೆ ನೀರು ಹರಿದು ಜನಜೀವನ ಅಸ್ತವ್ಯಸ್ತಗೊಂಡಿದ್ದು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನಗರದಲ್ಲಿ ಮುಂಗಾರು ಸಿದ್ಧತೆ ಸಭೆ ನಡೆಸಿ, ಪರಿಸ್ಥಿತಿ ಪರಿಶೀಲಿಸಿತು. ಮುಂದಿನ ಮಳೆಗಾಲದ ಒಳಗೆ ಪೂರ್ಣಗೊಳ್ಳಬೇಕಾದ ಕಾಮಗಾರಿಗಳು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ಪಡೆದು, ಅಗತ್ಯ ನಿರ್ದೇಶನ ನೀಡಿದರು.