15 ತಿಂಗಳ ರೈತರ ಪ್ರತಿಭಟನೆಗೆ ಅಂತ್ಯ ಹಾಡಲು ರೈತರ ಸಿದ್ದತೆ

ನವದೆಹಲಿ, ಡಿ.7- ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಹದಿನೈದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ತಮ್ಮ ಪ್ರತಿಭಟನೆಯನ್ನು ಅಂತ್ಯ ಹಾಡಲು ಮುಂದಾಗಿದ್ದಾರೆ.

ಪ್ರತಿಭಟನಾ ನಿರತ ರೈತರ ಮೇಲೆ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡುವುದು ಮತ್ತು ಕನಿಷ್ಠ ಬೆಂಬಲ ಬೆಲೆ ನೀಡುವ ಸಂಬಂಧ ಕೇಂದ್ರ ಸರ್ಕಾರ ರೈತರಿಗೆ ಲಿಖಿತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಅಂತ್ಯಗೊಳಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಸಂಘಟನೆ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರು ಪ್ರಸ್ತಾಪ ಮಾಡಿರುವ ವಿವಿಧ ವಿಷಯಗಳ ಕುರಿತಂತೆ ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡುವುದಾಗಿ ರೈತರಿಗೆ ಭರವಸೆ ನೀಡಿದೆ.

ತಜ್ಞರ ಸಮಿತಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಪದಾಧಿಕಾರಿಗಳು ಕೃಷಿಕ್ಷೇತ್ರದ ತಜ್ಞರು ಇರಲಿದ್ದು ರೈತರ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಚರ್ಚಿಸಿ ಸರ್ಕಾರಕ್ಕೆ ಮಾಹಿತಿ ನೀಡಲಿದ್ದಾರೆ.

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕಳೆದ ತಿಂಗಳು 29ರಂದು ಕೃಷಿಕರದ್ದು ಮಾಡುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ.

ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಸಂಬಂಧ ರೈತರು ಹೋರಾಟವನ್ನು ಮುಂದುವರಿಸಿದ್ದರು.ಇದೀಗ ಆ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಅತಿಶೀಘ್ರದಲ್ಲೇ ಎಲ್ಲಾ ರೈತ ಸಂಘಟನೆಗಳ ನಾಯಕರು ಸಭೆ ಸೇರಿ ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ನಡೆಸುತ್ತಿದ್ದ ಹೋರಾಟವನ್ನು ಅಂತ್ಯಗೊಳಿಸುವ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.