19ರಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ

ಬೀದರ್: ಸೆ.8:ಇಲ್ಲಿನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 19ರಂದು ಮಧ್ಯಾಹ್ನ 3ಕ್ಕೆ ಚುನಾವಣೆ ನಿಗದಿ ಪಡಿಸಲಾಗಿದೆ ಎಂದು ಉಪವಿಭಾಗಾಧಿಕಾರಿಯೂ ಆದ ಚುನಾವಣಾಧಿಕಾರಿ ಲವೀಶ್ ಒರ್ಡಿಯಾ ತಿಳಿಸಿದ್ದಾರೆ.

11ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯೊಳಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು. ರಜಾ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲ ದಿನಗಳಂದು ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸೆ. 19ರಂದು ಮಧ್ಯಾಹ್ನ 1ಗಂಟೆಯೊಳಗೆ ಎಲ್ಲಾ ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಬಳಿಕ ನಾಮಪತ್ರ ಹಿಂಪಡೆಯಲು ಅವಕಾಶ ಇದೆ. ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಗತ್ಯಬಿದ್ದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು. ಯಾವುದೇ ಸದಸ್ಯರು ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನಕ್ಕೆ ಒಂದಕ್ಕಿಂತ ಹೆಚ್ಚಿನ ಅಭ್ಯರ್ಥಿಗೆ ನಾಮನಿರ್ದೇಶನ ಹಾಗೂ ಅನುಮೋದನೆ ಮಾಡಲು ಅವಕಾಶ ಇರುವುದಿಲ್ಲ. ಎರಡೂ ಸ್ಥಾನಗಳಿಗೆ ಕೈ ಮೇಲಕ್ಕೆತ್ತುವುದರ ಮೂಲಕ ಚುನಾವಣೆ ನಡೆಸಲಾಗುತ್ತದೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಒಟ್ಟು 35 ಸದಸ್ಯ ಬಲದ ನಗರಸಭೆಗೆ 2021ರ ಏಪ್ರಿಲ್ 27ರಂದು ಚುನಾವಣೆ ನಡೆದಿತ್ತು. ವಾರ್ಡ್ ಸಂಖ್ಯೆ 26, 32ರ ಮೀಸಲಾತಿ ವಿವಾದ ಕೋರ್ಟ್ ಮೆಟ್ಟಿಲೇರಿದ್ದರಿಂದ ಇವೆರಡೂ ವಾರ್ಡ್‍ಗಳಿಗೆ 2021 ಸೆಪ್ಟೆಂಬರ್‍ನಲ್ಲಿ ಮತದಾನ ನಡೆಸಲಾಗಿತ್ತು.

ಫಲಿತಾಂಶ ಬಂದ ನಂತರ ಯಾವುದೇ ಪಕ್ಷಕ್ಕೂ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬಂದಿರಲಿಲ್ಲ. 16 ವಾರ್ಡ್‍ಗಳಲ್ಲಿ ಜಯ ಗಳಿಸಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಜೆಡಿಎಸ್ 9, ಬಿಜೆಪಿ 7, ಎಂಐಎಂ 2, ಎಎಪಿ 1 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಎಂಐಎಂ, ಎಎಪಿ ಬೆಂಬಲದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ಆಗ ಕೋವಿಡ್ ವಕ್ಕರಿಸಿದ್ದರಿಂದ ಚುನಾವಣೆ ನಡೆದಿರಲಿಲ್ಲ. ಅಂದಿನ ಬಿಜೆಪಿ ಸರ್ಕಾರ ಕೂಡ ಚುನಾವಣೆಗೆ ಮನಸ್ಸು ಮಾಡಿರಲಿಲ್ಲ ಎಂಬ ಆರೋಪಗಳಿವೆ. ಈಗ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೂರು ತಿಂಗಳ ನಂತರ ಚುನಾವಣೆ ನಡೆಸಲಾಗುತ್ತದೆ. ಇತರೆ ಪಕ್ಷಗಳ ನೆರವಿನೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎನ್ನಲಾಗುತ್ತಿದೆ.