2 ದಿನ ಪಾನಮುಕ್ತ ದಿನ; ಡಿಸಿ

ಮೈಸೂರು:ಡಿ:26: ನಾಳೆ ಜಿಲ್ಲೆಯ 3 ತಾಲ್ಲೂಕುಗಳಲ್ಲಿ ನಡೆಯಲಿರುವ ಗ್ರಾ.ಪಂ. ಚುನಾವಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರ ವಹಿಸಲು ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದರು.
ಅವರು ಇಂದು ಬೆಳಿಗ್ಗೆ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ನಾಳೆ ನಡೆಯಲಿರುವ ಗ್ರಾ.ಪಂ. ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರನ್ನು ಉದ್ದೇಶಿಸಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಮತದಾನಕ್ಕೆ ಆಗಮಿಸಿದ ವೇಳೆಯಲ್ಲಿ ಅವರಿಗೆ ಸ್ಯಾನಿಟೈಸರ್ ನೀಡುವುದು, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯಗಳಲ್ಲಿ ಯಾವುದೇ ಕೊರತೆ ಉಂಟಾಗದಂತೆ ಎಚ್ಚರ ವಹಿಸುವುದರೊಂದಿಗೆ ಚುನಾವಣಾಧಿಕಾರಿ ಹಾಗೂ ಸಿಬ್ಬಂಧಿಗಳು ಸಹ ಮಾಸ್ಕ್ ಧರಿಸಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರು ಚುನಾವಣೆಗೆ ನಿಯೋಜಿತರಾಗಿರುವ ಸಿಬ್ಬಂಧಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದರು. ನಾಳೆ ಮೈಸೂರು, ನಂಜನಗೂಡು, ಟಿ. ನರಸೀಪುರ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದ್ದು, ಇದಕ್ಕಾಗಿ 60ಕ್ಕೂ ಹೆಚ್ಚು ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ನಡೆಯುವ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಸಲುವಾಗಿ ನಿನ್ನೆ ಸಂಜೆ 5 ಗಂಟೆಯಿಂದ 27ರ ಸಂಜೆ 5 ಗಂಟೆಯವರೆಗೆ ಜಿಲ್ಲಾಧ್ಯಂತ ಮಧ್ಯ ಮಾರಾಟವನ್ನು ನಿಷೇಧಿಸಿ ಪಾನ ವಿರೋಧಿ ದಿನಗಳೆಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.