2021 ಕಾಂಗ್ರೇಸ್‌ಗೆ ಹೋರಾಟದ ವರ್ಷ: ಡಿಕೆಶಿ

ಬೆಂಗಳೂರು,ಡಿ.೩೧- ಕಾಂಗ್ರೆಸ್ ಕಾರ್ಯಕರ್ತರಿಗೆ ೨೦೨೧ ಹೋರಾಟದ ವರ್ಷವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುವಂತೆ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಪ್ರತಿಯೊಂದು ಕ್ಷೇತ್ರದಲ್ಲಿ ಕಾಣುವ ವೈಫಲ್ಯಗಳ ವಿರುದ್ಧ ಹೋರಾಟ ಮಾಡುವಂತೆ ಅವರು ಸೂಚನೆ ನೀಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷ ಅಧಿಕಾರದಲ್ಲಿದ್ದಾಗ ಉಪಚುನಾವಣೆಗಳು ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಬೇರೆ ಪಕ್ಷ ಅಧಿಕಾರದಲ್ಲಿ ಇಲ್ಲದೇ ಇದ್ದಾಗ ಗೆಲುವು ಸಾಧಿಸುವುದೇ ಬೇರೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಳ್ಳಾರಿ ಲೋಕಸಭೆ ಉಪಚುನಾವಣೆ,ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿಯ ಪರಿಸ್ಥಿತಿ ಬಿಜೆಪಿಗೆ ಬರಲಿದೆ ಕಾಲ ದೂರವಿಲ್ಲ ಎಂದು ಅವರು ಹೇಳಿದರು.

ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ೨೦೨೩ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎನ್ನುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು ಯಡಿಯೂರಪ್ಪ ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಮಸ್ಯೆಗೆ ಸ್ಪಂದಿಸಿಲ್ಲ:
ಇಡೀ ರಾಜ್ಯ ಕೊರೊನಾ ಸೋಂಕು ಸಂಕಷ್ಟ ಸಮಯದಲ್ಲಿ ಬಳಲುತ್ತಿದ್ದರೂ ಅವರ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ

೨೦೨೦ರಲ್ಲಿ ಕಾಣಿಸಿಕೊಂಡ ಮಹಾಮಾರಿ ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಇಂತಹ ಸಂಕಷ್ಟದ ಸಮಯದಲ್ಲಿ ಜನ ಜೀವನ ನಡೆಸಿದ್ದಾರೆ ದೂರವಾಗಲಿ ಹೊಸವರ್ಷ ಎಲ್ಲರಿಗೂ ಒಳಿತು ಮಾಡಲಿ ಎಂದು ಹೇಳಿದ್ದಾರೆ.

ಈ ವರ್ಷ ಕೊರೊನಾ ಸೋಂಕಿನಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು ಮುಂದಿನ ವರ್ಷ ಒಳ್ಳೆಯ ಶಿಕ್ಷಣ ಸಿಗಲಿ ಎಂದು ಹೇಳಿದ್ದಾರೆ.

ಇನ್ನೂ ಪೂರ್ಣ ಫಲಿತಾಂಶ ಬಂದಿಲ್ಲ

ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ಣಪ್ರಮಾಣದ ಫಲಿತಾಂಶ ಇನ್ನೂ ಬಂದಿಲ್ಲ. ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ರಾಜ್ಯದ ಎಲ್ಲಾ ಕಡೆ ಉತ್ತಮ ಸಾಧನೆ ಮಾಡಿದ್ದಾರೆ ಇದು ಖುಷಿ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಪೂರ್ಣ ಪ್ರಮಾಣದ ಫಲಿತಾಂಶ ಬಂದ ನಂತರ ಪ್ರತಿಕ್ರಿಯೆ ನೀಡುವುದಾಗಿ ಅವರು ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗೆದ್ದಿದ್ದಾರೆ ಎನ್ನುವ ಕುರಿತಂತೆ ವಸ್ತುಸ್ಥಿತಿ ತಿಳಿದು ಮಾತನಾಡುವುದು ಒಳ್ಳೆಯದು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ