27,28 ರಂದು ಗುವಿವಿಯಲ್ಲಿ ಅಂತರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ

ಕಲಬುರಗಿ,ಸೆ.25-ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ನವದೆಹಲಿಯ ಭಾರತೀಯ ಗ್ರಂಥಾಲಯದ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ 66ನೇ ಭಾರತೀಯ ಸಂಘದ ಅಂತರಾಷ್ಟ್ರೀಯ ಸಮ್ಮೇಳನವನ್ನು ಸೆ.27 ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕುಲಪತಿ ಪ್ರೊ.ದಯಾನಂದ ಅಗಸರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ. ಪುಣೆಯ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಪ್ರೊ.ರಾಜೇಂದ್ರಕುಮಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.ಭಾರತೀಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಭಾರತೀಯ ಗ್ರಂಥಾಲಯ ಸಂಘದ ಹಿಂದಿನ ಅಧ್ಯಕ್ಷ ಡಾ.ಡಿ.ವಿ.ಸಿಂಗ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಅವರನ್ನು ಸನ್ಮಾನಿಸಲಾಗುವುದು.
ಈ ಅಂತರರಾಷ್ಟ್ರೀಯ ಮಟ್ಟದ ಗ್ರಂಥಾಲಯ ಸಮ್ಮೇಳನದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಂದ 300ಕ್ಕೂ ಹೆಚ್ಚು ಜನ ಗ್ರಂಥಪಾಲಕರು ಹಾಗೂ ಗ್ರಂಥಾಲಯ ವಿಜ್ಞಾನಿಗಳು ಭಾಗವಹಿಸಿ ಗ್ರಂಥಾಲಯ ವಿಜ್ಞಾನಕ್ಕೆ ಸಂಬಂಧಿಸಿದ ಒಟ್ಟು 82 ಸಂಶೋಧನಾ ಲೇಖನಗಳನ್ನು ಈ ಸಮ್ಮೇಳನದಲ್ಲಿ ಮಂಡಿಸಲಿದ್ದಾರೆ.
ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಾದ ಹೊಸ ಹೊಸ ಬೆಳವಣಿಗೆಗಳ ಕುರಿತು ಹತ್ತಕ್ಕೂ ಹೆಚ್ಚು ಗ್ರಂಥಾಲಯ ವಿಜ್ಞಾನಕ್ಕೆ ಸಂಬಂಧಿಸಿದ ಸಾಫ್ಟವೇರ್‍ಗಳ ಕುರಿತು ಮಾಹಿತಿಯನ್ನು ವಿವಿಧ ಕಂಪನಿಗಳ ತಜ್ಞರು ಪರಿಚಯಿಸಲಿದ್ದಾರೆ.
ಸೆ.28 ರಂದು ಮಧ್ಯಾಹ್ನ 2 ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡಯಲಿದ್ದು, ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಇದೇ ಸಂದರ್ಭದಲ್ಲಿ ಗ್ರಂಥಾಲಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕೆಲವು ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಗ್ರಂಥಪಾಲಕರಾದ ಡಾ.ಸುರೇಶ ಜಂಗೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೋಳಿಸಬೇಕು ಎಂದು ಅವರು ಕೋರಿದ್ದಾರೆ.