
ಬೆಂಗಳೂರು, ಮೇ ೧೪- ಮುಂಬರುವ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರಿಗೆ ಬಿಡುವ ತೀರ್ಮಾನವನ್ನು ಮಾಡಲಾಗಿದೆ.
ಬಿಜೆಪಿ ಕಚೇರಿಯಲ್ಲಿಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ನೇತೃತ್ವದಲ್ಲಿ ಕೋರ್ಕಮಿಟಿ ಸಭೆ ನಡೆದಿದ್ದು, ಈ ಸಭೆಯಲ್ಲಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿ ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರಿಗೆ ಬಿಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಚುನಾವಣೆಗಳಲ್ಲಿ ಯಾರನ್ನು ಅಭ್ಯರ್ಥಿಗಳನ್ನಾಗಿಸಿದರೆ ಗೆಲುವು ಸುಲಭ ಎಂಬ ಬಗ್ಗೆಯೂ ಚರ್ಚೆಗಳಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಾತಿ ಹಾಗೂ ಪ್ರಾದೇಶಿಕವಾರು ಲೆಕ್ಕಾಚಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡುವ ಬಗ್ಗೆಯೂ ಚರ್ಚೆಗಳಾಗಿವೆ.
ಈ ಚುನಾವಣೆಯಲ್ಲಿ ಯಾರು ಅಭ್ಯರ್ಥಿಗಳಾದರೆ ಸೂಕ್ತ ಎಂಬ ಬಗ್ಗೆ ವರಿಷ್ಠರಿಗೆ ಸಂಭವನೀಯ ಅಭ್ಯರ್ಥಿಗಳನ್ನು ಪಟ್ಟಿಯನ್ನು ಕಳುಹಿಸುವ ಬಗ್ಗೆಯೂ ಸಮಾಲೋಚನೆಗಳು ನಡೆದವು.
ರಾಜ್ಯಸಭಾ ಚುನಾವಣೆಗೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ ರಾಮಮೂರ್ತಿ ಅವರನ್ನೇ ಅಭ್ಯರ್ಥಿಗಳನ್ನಾಗಿಸುವ ಬಗ್ಗೆಯೂ ಚರ್ಚೆಗಳು ನಡೆದಿದ್ದು, ಬಹುತೇಕ ಇವರಿಬ್ಬರ ಹೆಸರೇ ಅಂತಿಮವಾಗಲಿದೆ.
ವಿಧಾನ ಪರಿಷತ್ ಚುನಾವಣೆಗೆ ಹಲವು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದು, ಎಂ.ಬಿ ನಂದೀಶ್, ಗಿರೀಶ್ ಪಟೇಲ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಮಗ್ದೂಮ್, ಅಶ್ವತ್ಥ ನಾರಾಯಣ, ನಿರ್ಮಲ್ಕುಮಾರ್ ಸುರಾನಾ, ಮಹೇಶ್ ಟೆಂಗಿನಕಾಯಿ ಇವರುಗಳ ಹೆಸರುಗಳು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.
ಇಂದಿನ ಕೋರ್ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕಂದಾಯ ಸಚಿವ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಪ್ರಮುಖ ಮುಖಂಡರುಗಳು ಪಾಲ್ಗೊಂಡಿದ್ದರು.