5 ಮತ್ತು 8ನೇ ತರಗತಿ ಮೌಲ್ಯಾಂಕನ ಮಾ. 27 ರಿಂದ

ಭಾಲ್ಕಿ:ಮಾ.24: ಪ್ರಸ್ತುತ 2022-23ನೇ ಸಾಲಿನ ರಾಜ್ಯ ಪಠ್ಯ ಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ಮಾ.27 ರಿಂದ ನಡೆಸಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ತಿಳಿಸಿದರು.

ಈ ಕುರಿತು ಪ್ರಕಟಣೆ ಹೊರಡಿಸಿದ ಅವರು, ಪ್ರಸ್ತುತ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೆ ತರಗತಿ ವಿದ್ಯಾರ್ಥಿಗಳಿಗೆ ಮಾ.27 ರಿಂದ ಏ.1 ರ ವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುತ್ತಿದೆ. 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.27 ರಿಂದ ಮಾ.30 ರ ವರೆಗೆ ಪರೀಕ್ಷೆ ನಡೆಯುವವು. 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.27 ರಿಂದ ಏ.1 ರ ವರೆಗೆ ಪರೀಕ್ಷೆ ನಡೆಸಲಾಗುವುದು. 5 ಮತ್ತು 8ನೇ ವಿದ್ಯಾರ್ಥಿಗಳ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ಅನುತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.