
ಚಾಮರಾಜನಗರ: ಮಾ.27:- ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಸುಮಾರು 64ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಡಿಬಿಟಿ ಮೂಲಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ, ಪ್ರೋತ್ಸಾಹಧನ ಹಾಗೂ ಇತರೆ ಸೌಲಭ್ಯಗಳು ಜಮೆಯಾಗುತ್ತಿದೆ ಎಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಗುಂಡ್ಲುಪೇಟೆಯ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಅಭಿವೃದ್ದಿ ಕಾರ್ಯವು ಜನರ ಸಕ್ರಿಯ ಸಹಭಾಗಿತ್ವ ಮತ್ತು ಸಹಕಾರವಿಲ್ಲದೆ ಪೂರ್ಣವಾಗುವುದಿಲ್ಲ. ಸಧೃಢ ಭಾರತ ನಿರ್ಮಾಣಕ್ಕೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ, ಪ್ರಧಾನಮಂತ್ರಿ ಉಜ್ವಲ್ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಷನ್, ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಯಲ್ಲಿವೆ ಎಂದರು.
ಗಡಿ ಜಿಲ್ಲೆ ಚಾಮರಾಜನಗರದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು, ಕಳೆದ ಡಿಸೆಂಬರ್ 13ರಂದು ಮುಖ್ಯಮಂತ್ರಿಯವರು ಜಿಲ್ಲೆಗೆ ಭೇಟಿ ನೀಡಿ ಸುಮಾರು 1,099 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚಾಮರಾಜನಗರ ಮತ್ತು ಹನೂರಿನಲ್ಲಿ ನಡೆದ ಮುಖ್ಯಮಂತ್ರಿಯವರ ಎರಡು ಕಾರ್ಯಕ್ರಮಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿದ ಜಿಲ್ಲೆಯ ಜನತೆಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
2022-23ನೇ ಸಾಲಿನಲ್ಲಿ ಪ್ರವಾಹದಿಂದ ಹಾನಿಯಾದ 1,750 ಮನೆಗಳಿಗೆ 12.78 ಕೋಟಿ ಪರಿಹಾರ ಮಂಜೂರು ಮಾಡಲಾಗಿದೆ. ಪ್ರವಾಹದಿಂದ ಹಾನಿಗೀಡಾದ 8,052 ಹೆಕ್ಟೇರ್ ವಿಸ್ತೀರ್ಣದ 14,949 ರೈತ ಫಲಾನುಭವಿಗಳಿಗೆ 15 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಸುತ್ತುನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 2,432 ಸ್ವ ಸಹಾಯ ಸಂಘಗಳಿಗೆ 35.70 ಕೋಟಿ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದರು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಇದುವರೆಗೆ 3,176 ಫಲಾನುಭವಿಗಳಿಗೆ ಒಟ್ಟು 2,541 ಲಕ್ಷ ಸಹಾಯಧನ ನೀಡಲಾಗಿದೆ. ನರೇಗಾ ಯೋಜನೆಯಡಿ ಈವರೆಗೆ 5.05 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದ್ದು 1,435 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಉಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸ್ವಚ್ಚತಾ ಅಭಿಯಾನದ ಮೂಲಕ ಪ್ರತಿಯೊಬ್ಬರ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಹೆಣ್ಣು ಮಕ್ಕಳ ಹಿತದೃಷ್ಠಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಹೆಣ್ಣು ಮಕ್ಕಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹಿಳಾ ಪೂರಕ ಯೋಜನೆಗಳಿಂದ ರಾಜ್ಯದ ಉನ್ನತ ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಮಹಿಳೆಯರು ಮುಂದಿದ್ದಾರೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ ಎಂದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಇತರೆ ಗಣ್ಯರು ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ವಿವಿಧ ಇಲಾಖೆಗಳು ತೆರೆದಿದ್ದ ಯೋಜನೆ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಿದರು.
ವಿಧಾನಪರಿಷತ್ತಿನ ಸದಸ್ಯರಾದ ವೈ. ನಾರಾಯಣಸ್ವಾಮಿ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಪಿ. ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಸದಸ್ಯರಾದ ಜಿ.ಎಸ್. ಕಿರಣ್, ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.