75ನೇ ಸ್ವಾತಂತ್ರ್ಯ ದಿನಾಚರಣೆ: ಪೂರ್ವಸಿದ್ಧತಾ ಸಭೆ


ಸಂಜೆವಾಣಿ ವಾರ್ತೆ
ಬಳ್ಳಾರಿ,ಜು.31: ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
75ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಸನ್ಮಾನ ಸಮಿತಿ, ಸ್ವಚ್ಛತಾ, ಪರೇಡ್ ಸಮಿತಿ, ಆಹಾರ, ಮಾಧ್ಯಮ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಸಮಿತಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆ.15ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಧ್ವಜಾರೋಹಣ ನೆರವೇರಿಸಿ, ವಿವಿಧ ಪಡೆಗಳಿಂದ ಗೌರವವಂದನೆ ಸ್ವೀಕರಿಸಿ, ಧ್ವಜಾರೋಹಣ ಸಂದೇಶ ನೀಡಲಿದ್ದಾರೆ.
ಇದಕ್ಕೂ ಮುಂಚೆ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ ಬೃಹತ್ ಧ್ವಜಸ್ತಂಭದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಲಿದ್ದಾರೆ. ವಿಮ್ಸ್ ಬಳಿಯ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಪ್ರತಿಮೆಗೆ ಹಾಗೂ ನಗರದ ರಾಜಕುಮಾರ್ ಉದ್ಯಾನವನದಲ್ಲಿರುವ ಮಹಾತ್ಮಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಹಾಗೂ ಎಸ್ಸೆಸ್ಸೆಲ್ಸಿ/ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದರು.
ವಿವಿಧ ಸರಕಾರಿ ಸವಲತ್ತುಗಳ ಪತ್ರಗಳನ್ನು ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 3ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ವಿವಿಧ ಸಮಿತಿಗಳ ಅಧಿಕಾರಿಗಳು ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ ಅವರು, ಪೊಲೀಸ್, ಗೃಹರಕ್ಷಕದಳ, ಎನ್‍ಸಿಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ, ಅಬಕಾರಿ, ಅರಣ್ಯ ಇಲಾಖೆ ತಂಡಗಳು ಸೇರಿದಂತೆ ವಿವಿಧ ತಂಡಗಳು ಪರೇಡ್‍ನಲ್ಲಿ ಭಾಗವಹಿಸಲಿವೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಮನೆಯ ಮೇಲೂ ತಿರಂಗಾ ಹಾರಾಟ:
ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಜಿಲ್ಲೆಯ ಪ್ರತಿ ಮನೆಯ ಮೇಲೂ ತಿರಂಗಾ ಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಕರೆ ನೀಡಿದರು.
ಸರಕಾರಿ ನೌಕರರು ಹಾಗೂ ಹೊರಗುತ್ತಿಗೆ ನೌಕರರು ತಮ್ಮ ಮನೆಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜ ಹಾರಿಸುವುದರ ಜೊತೆಗೆ ಸುತ್ತಮುತ್ತಲಿನ ಜನರು ಸಹ ಧ್ವಜ ಹಾರಿಸಲು ಪ್ರೇರೆಪಿಸಬೇಕು. ಧ್ವಜ ಬಳಕೆ ವಿಧಾನದ ಕುರಿತು ನಗರ ಮತ್ತು ಸ್ಥಳೀಯ ಸಂಸ್ಥೆಗಳು ಈ ಕುರಿತು ಜಿಂಗಲ್ಸ್‍ಗಳ ಮೂಲಕ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ಹರ್‍ಘರ್ ತಿರಂಗಾಗೆ ಸಂಬಂಧಿಸಿದಂತೆ ಕೇಬಲ್, ಚಲನಚಿತ್ರಮಂದಿರಗಳು, ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಿಸಿ ಪವನಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದರು.
ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಅನೇಕ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಜಿ.ಲಿಂಗಮೂರ್ತಿ, ಅಪರ ಜಿಲ್ಲಾಧಿಕಾರಿಗಳಾದ ಪಿ.ಎಸ್.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಇದ್ದರು.