90 ಲಕ್ಷ ಮೌಲ್ಯದ ಡ್ರಗ್ಸ್ ವಶ ಮೂವರು ಗ್ಯಾಂಗ್ ಸೆರೆ

ಬೆಂಗಳೂರು, ಜು.೧೬- ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಆರೋಪಿಗಳ ಗ್ಯಾಂಗ್ ಬಂಧಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು ೯೦ ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.


ಸುಮಿತ್ರಾ, ಸೀತಾ ಹಾಗೂ ಚಂದ್ರಶೇಖರ್ ಬಂಧಿತ ಗ್ಯಾಂಗ್‌ನ ಆರೋಪಿಗಳಾಗಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತ ತಿಳಿಸಿದ್ದಾರೆ.
ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾದಕ ವಸ್ತು ಗಾಂಜಾ, ಹ್ಯಾಶಿಶ್ ಆಯಿಲ್ ಕಳ್ಳ ಸಾಗಣೆ ಮಾಡಿಕೊಂಡು ಬಂದು ನಗರದ ವಿವಿಧ ಕಡೆಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು.
ಮಾಗಡಿ ರಸ್ತೆ ಬಳಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಖಚಿತವಾದ ಮಾಹಿತಿಯನ್ನು ಆಧರಿಸಿ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಡ್ರಗ್ ಪೆಡ್ಲರ್‌ಗಳಿಂದ ೯೦ ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.